ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಕನ್ನಡ ಮಾತಾಡಿದ್ದಕ್ಕೆ ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಬಳಿ ಕಿಡಿಗೇಡಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಅಲ್ಲದೇ ಎರಡೂ ರಾಜ್ಯಗಳ ಬಸ್ ಸಂಚಾರ ಕೂಡ ಸ್ಥಗಿತವಾಗಿದೆ.
ಕೊಲ್ಹಾಪುರ ಸೇರಿ ಕೆಲವು ಕಡೆ ಶಿವಸೇನೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ಬಸ್ ತಡೆದು ಪ್ರತಿಭಟನೆ ನಡೆಸಿ ಬಸ್ ಮೇಲೆ ಭಗವಾ ಧ್ವಜ ಕಟ್ಟಿ, ಬಸ್ ಮೇಲೆ ಕಪ್ಪು ಮಸಿಯಿಂದ ಬರೆದು ಶಿವಸೇನೆ ಮತ್ತು ಎಂಎನ್ಎಸ್ ಕಿಡಿಗೇಡಿಗಳು ಉದ್ಧಟತನ ಪ್ರದರ್ಶಿಸಿದ್ದಾರೆ. ಹಾಗಾಗಿ, ಕರ್ನಾಟಕದಿಂದ ಹೊರಡುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ಕೊಲ್ಹಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಆರ್ ಟಿಸಿ ಬಸ್ಗಳ ಸಂಚಾರ ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್ಗಳು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದವು. ಮುಂದಿನ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ಸಾರಿಗೆ ಬಸ್ ಸ್ಥಗಿತ- ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಚರಿಸುವ ಎಲ್ಲಾ ಮಹಾರಾಷ್ಟ್ರ ಸಾರಿಗೆ ಬಸ್ಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಮಹಾರಾಷ್ಟ್ರ ಬಸ್ ಮೇಲೆ ಶುಕ್ರವಾರ ರಾತ್ರಿ 9.10ರ ಸುಮಾರಿಗೆ ಚಿತ್ರದುರ್ಗದ ಐಮಂಗಲ ಬಳಿ ಕನ್ನಡಪರ ಕಾರ್ಯಕರ್ತರು ದಾಳಿ ಮಾಡಿ ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೂ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದರು. ಅಲ್ಲದೆ ಮಹಾರಾಷ್ಟ್ರ ಸಾರಿಗೆ ಬಸ್ಸಿಗೂ ಕಪ್ಪು ಮಸಿ ಬಳಿದಿದ್ದರು. ದಾಳಿ ಮಾಡಿ ಮಸಿ ಬಳಿದಿದ್ದ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಅಲ್ಲಿಯವರೆಗೂ ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಪುನಾರಂಭಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರನಾಯಕ್ ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಯಾಣಿಕರ ಪರದಾಟ:
ಕಿಡಿಗೇಡಿಗಳು ಮಾಡುವ ಕೃತ್ಯದಿಂದಾಗಿ ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಎರಡೂ ರಾಜ್ಯಗಳ ಪ್ರಯಾಣಿಕರು ಪರದಾಡುವಂತಾಗಿದೆ. ಕೂಡಲೇ ಎರಡೂ ಸರ್ಕಾರಗಳು ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ಕರ್ನಾಟಕ-ಮಹಾರಾಷ್ಟ್ರ ಗಡಿಯವರೆಗೆ ಮಾತ್ರ ಎರಡೂ ರಾಜ್ಯಗಳು ಬಸ್ಗಳು ಸಂಚರಿಸುತ್ತಿವೆ. ಅಲ್ಲಿಂದ ಮುಂದೆ ಅವರ ರಾಜ್ಯದ ಬಸ್ಗಳಲ್ಲಿ ಜನರು ಸಂಚರಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಸ್ವಲ್ಪ ದಿನ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಏನಿದು ಘಟನೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಒಬ್ಬರು ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಆರೋಪ ಮಾಡಿದ್ದು ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ.
ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾವಾಗಿ ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ KSRTC ಬಸ್ಗಳ ಸಂಚಾರ ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್ಗಳ ಸಂಚಾರ ನಡೆಸುತ್ತಿದ್ದು, ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.