ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಭವ್ಯ ಸಮಾರಂಭವನ್ನು 2026ನೇ ಮಾರ್ಚ್ 13 ರಂದು ಸಂಜೆ 5:00 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೀಷಾ ಖಾನಂ ಅವರು ಅಶಯ ನುಡಿಗಳನ್ನಾಡಲಿರುವರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಿಗೆ ನೀಡಲಾಗುವ 2025ನೇ ಸಾಲಿನ ವಿಶೇಷ ಪ್ರಶಸ್ತಿಯನ್ನು ಸರಿತಾ ರೈ ಅವರಿಗೆ ನೀಡಿ ಗೌರವಿಸಲಾಗುವುದು. ಜೊತೆಗೆ ಆಂದೋಲನ ದತ್ತಿ ಪ್ರಶಸ್ತಿ, ಅಭಿಮಾನಿ ದತ್ತಿ ಪ್ರಶಸ್ತಿ ಸೇರಿದಂತೆ ವಿವಿಧ ಹತ್ತು ದತ್ತಿ ಪ್ರಶಸ್ತಿಗಳನ್ನು ಆಯಾ ಕ್ಷೇತ್ರದ ಸಾಧಕ ಪತ್ರಕರ್ತರಿಗೆ ವಿತರಿಸಲಾಗುವುದು.
ಮಾಧ್ಯಮ ಲೋಕದ ಈ ಸಂಭ್ರಮದ ಕ್ಷಣಕ್ಕೆ ಪತ್ರಕರ್ತರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ. ಪ್ರಕಟಣೆಯಲ್ಲಿ ಕೋರಿದ್ದಾರೆ.

