ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಕುರಿತು ಸರ್ಕಾರದಿಂದ ಕಟ್ಟುನಿಟ್ಟಾಗಿ ಮಾರ್ಗಸೂಚಿ ಹೊರಡಿಸಿದ್ದು, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಆನಂದ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿಯ ಮೊದಲನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಂಗಾರು ಉತ್ತಮ ರೀತಿಯಲ್ಲಿ ಆಗಿದ್ದು, ರೈತರಿಗೆ ಯಾವುದೇ ತೊಂದರೆ ಆಗದಂತೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಿಸಲು ಕೃಷಿ ಇಲಾಖೆ ವತಿಯಿಂದ ಅಗತ್ಯ ಕ್ರಮವಹಿಸಲು ತಿಳಿಸಿದರು.
ತೋಟಗಾರಿಕೆ ಇಲಾಖೆ, ರೇಷ್ಮೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಶುಪಾಲನಾ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಯೋಜನಾಧಿಕಾರಿ ರಾಘವೇಂದ್ರ, ಲೆಕ್ಕಾಧಿಕಾರಿ ಕೆಂಚಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.