ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿವೆ-ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ನಿಲ್ಲಿಸಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಉಚಿತ ಪ್ರಯಾಣ ಯೋಜನೆಯ ಬಗ್ಗೆ ಅನೇಕ ಮಹಿಳೆಯರು ತಮ್ಮೊಂದಿಗೆ ಮಾತನಾಡಿದ್ದಾರೆ ಮತ್ತು ಟಿಕೆಟ್ ಖರೀದಿಸಲು ಸಿದ್ಧರಿದ್ದೇವೆ ಎಂದು ಮಹಿಳೆಯರು ತಿಳಿಸಿದ್ದು ಶಕ್ತಿ ಯೋಜನೆ ಮಾರ್ಪಾಡು ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಆದರೆ ತಮಗೆ ಯಾವುದೇ ಹಣಕಾಸಿನ ಸಮಸ್ಯೆಗಳಿಲ್ಲ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನಿಲ್ಲಿಸಬೇಕು ಎಂದು ಯಾರಾದರೂ ಹೇಳಲು ಸಾಧ್ಯವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

 ಐದು ಗ್ಯಾರಂಟಿಗಳನ್ನು ಒಂದರ ಹಿಂದೆ ಒಂದರಂತೆ ತೆಗೆದು ಹಾಕಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂಬ ಸಂದೇಶ ಮೂಡಿದೆ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಕಾಂಗ್ರೆಸ್ ನವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಪ್ರತಿ ತಾಲ್ಲೂಕಿನಲ್ಲಿ 3,000 ದಿಂದ 4,000 ಬಿಪಿಎಲ್ ಕುಟುಂಬದ ಕಾರ್ಡ್‌ಗಳನ್ನು ರದ್ದುಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಇದು ಒಂದರ ಹಿಂದೆ ಒಂದರಂತೆ ಖಾತರಿ ಯೋಜನೆಗಳನ್ನು ಹಿಂಪಡೆಯುವ ಸೂಚನೆಯೇ ಹೊರತು ಬೇರೇನೂ ಅಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದ ನಿಜವಾದ ಬಣ್ಣ ಶೀಘ್ರದಲ್ಲೇ ಬಯಲಾಗಲಿದೆ. ಕರ್ನಾಟಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ. ಆದರೆ ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯಿಂದಾಗಿ ಆರ್ಥಿಕತೆ ಕುಸಿದಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಸರ್ಕಾರ ಬೇರೆ ಬೇರೆ ಉದ್ದೇಶಗಳಿಗೆ ಹಣ ಲಪಟಾಯಿಸುತ್ತಿದ್ದು, ಇದರಿಂದ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎಂದು ಕುಮಾರಸ್ವಾಮಿ ದೂರಿದರು.

- Advertisement -  - Advertisement -  - Advertisement - 
Share This Article
error: Content is protected !!
";