ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಹೊರತುಪಡಿಸಿ ಬೇರೆ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕಡಬೂರಿನಲ್ಲಿ ಶಿವ, ಗಣಪತಿ ದೇಗುಲ ಉದ್ಘಾಟಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿಯಿಂದ ಬೇರೆ ಅಭಿವೃದ್ಧಿ ಆಗುತ್ತಿಲ್ಲ, ಸರ್ಕಾರಕ್ಕೆ ನಿಲುವಿದ್ದರೆ ಅಭಿವೃದ್ಧಿ ಮಾಡಬಹುದಾಗಿತ್ತು. ಗ್ಯಾರಂಟಿ ಕಾರಣಕ್ಕಾಗಿ ಜನರಿಗೆ ತೆರಿಗೆಯ ಹೊರೆಯೂ ಹೆಚ್ಚಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ರಾಜ್ಯ ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಎಡವಿದ್ದು, ಉದ್ಯೋಗ ಆಕಾಂಕ್ಷಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈಗ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಕಾದು ನೋಡಬೇಕು, ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಕೊಟ್ಟರಾ ಎಂದು ಪ್ರಶ್ನಿಸುವುದಲ್ಲ. ಅವರು ಕೊಡಲ್ಲಾ- ನಾನು ಕೊಡಲ್ಲಾ ಎನ್ನುವುದಲ್ಲ. ಎರಡೂವರೆ ವರ್ಷದಿಂದ ಕುರ್ಚಿ ಹಂಚಿಕೆಯಲ್ಲಿ ಸಮಯ ಕಳೆದಿದ್ದು ಈಗಲಾದರೂ ಸರಿಪಡಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಾಕೀತು ಮಾಡಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಎಂದು ಅಪಪ್ರಚಾರ ಮಾಡಿ ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರು. ಈಗ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಏನು..? ಗುತ್ತಿಗೆದಾರರು ಬದುಕಲು ಸಾಧ್ಯವಾಗುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ತಲುಪಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಟೀಕಾಪ್ರಹಾರ ಮಾಡಿದರು.
ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಆಗಮಿಸುತ್ತಾರ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯದಲ್ಲಿರುವ ಈ ಕೆಟ್ಟ ಸರ್ಕಾರ ಕಿತ್ತೆಸೆದು ಒಳ್ಳೆಯ ಸರ್ಕಾರ ನೀಡಲು, ಚುನಾವಣೆಯಲ್ಲಿ ನನ್ನ ಪಾತ್ರವನ್ನು ನಾನು ನಿರ್ವಹಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ಬಿಜೆಪಿ – ಜೆಡಿಎಸ್ ಮೈತ್ರಿ ಸ್ಥಳೀಯ ಚುನಾವಣೆಯಲ್ಲೂ ಇರಲಿದೆಯೇ ಎಂಬ ಪ್ರಶ್ನೆಗೆ ಕುರಿತು ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಪಕ್ಷಗಳು ಜೊತೆ ಇರುವ ಉದ್ದೇಶ ಮೈತ್ರಿ ಮಾಡಿಕೊಂಡಿದ್ದೇವೆ, ಜೊತೆಗೆ ಇದ್ದೇವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಮೈತ್ರಿ ಸರ್ಕಾರಕ್ಕೆ ಜನರು ಬೆಂಬಲ ನೀಡಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮುಂಬರುವ ಚುನಾವಣೆಯಲ್ಲಿ ನಿಖಿಲ್ ರಾಮನಗರದಿಂದ ಸ್ಪರ್ಧೆ ಮಾಡುತ್ತಾರ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಮಾತನಾಡಿದ ಕೇಂದ್ರ ಸಚಿವರು, ಜನರಿಗೆ ಯಾರ್ಯಾರ ನಡವಳಿಕೆ ಏನು ಎಂಬುದು ಮನವರಿಕೆಯಾಗಿದೆ. ರಾಮನಗರ ಜಿಲ್ಲೆ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಿಗೂ ಸೂಕ್ತ ಅಭ್ಯರ್ಥಿಗೆ ಕೊರತೆಯಿಲ್ಲ. ಮುಂದಿನ ಚುನಾವಣೆಗೆ ಮೈತ್ರಿ ಸರ್ಕಾರಕ್ಕೆ ಜನರ ಬೆಂಬಲ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮನರೇಗಾ ಯೋಜನೆ ಲೋಪದೋಷಗಳನ್ನು ಕೇಂದ್ರ ಸರ್ಕಾರ ಸರಿಪಡಿಸಿ ವಿಬಿಜಿ ರಾಮ್ ಜಿ ಯೋಜನೆ ಜಾರಿಗೆ ತಂದಿದೆ. ಮನರೇಗಾದಿಂದ ಉತ್ತಮ ಕೆಲಸ ಆಗಲಿದೆ. ವಿ ಬಿ ಜಿ ರಾಮ್ ಜಿ ಯೋಜನೆಯಿಂದ ಆಗುವುದಿಲ್ಲ ಎಂಬ ಕಾಂಗ್ರೆಸ್ ಅಪಪ್ರಚಾರಕ್ಕೆ ಜನರು ಬೆಲೆ ಕೊಡಬಾರದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದರು.

