ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ-ಲಕ್ಷ್ಮೀ ಹೆಬ್ಬಾಳ್ಕರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿ ಗೌರವಧನ ಹೆತ್ತಳ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿದರು‌‌‌.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ ಇರುತ್ತೇನೆ. ರಾಜ್ಯದ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್​ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಎನ್. ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಮತ್ತಿತರರ ಮುಖಂಡರು ಸಭೆಯಲ್ಲಿ ಇದ್ದರು.

 

- Advertisement -  - Advertisement - 
Share This Article
error: Content is protected !!
";