ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು.
ಸುವರ್ಣಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಕುರಿತು ಚರ್ಚಿಸಲು ಸಮಾಜದ ಮುಖಂಡರುಗಳನ್ನು ಕರೆಕೊಂಡು ಬರುವಂತೆ ಸಿಎಂ ನನಗೆ ಸೂಚಿಸಿದ್ದರು.ಸಿ.ಸಿ.ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿ ಸಭೆಗೆ ಆಹ್ವಾನ ನೀಡಿದೆ ಆದರೆ ಯಾರೊಬ್ಬರೂ ಸಭೆಗೆ ಬರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಇದ್ದಾಗ 2A ಮೀಸಲಾತಿ ಯಾಕೆ ಕೊಡಲಿಲ್ಲ? ಆಗ ಮೀಸಲಾತಿ ಕೊಡದೇ ಮೂಗಿಗೆ ತುಪ್ಪಸವರುವ ಕೆಲಸ ಮಾಡಿ ಈಗ ದೂರುತ್ತಿರುವುದಕ್ಕೆ ಸಚಿವೆ ಹೆಬ್ಬಾಳ್ಕರ್ ಕಿಡಿಕಾರಿದರು.
ಕೆಲವರ ಪ್ರಚೋದನೆಯಿಂದಾಗಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.ನ್ಯಾಯಾಲಯದ ಆದೇಶದಂತೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ವತಃ ಪ್ರತಿಭಟನಾಕಾರರೇ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು. ಆದರೆ, ಪ್ರತಿಭಟನೆಯಲ್ಲಿ ಆಗಿದ್ದೇನು ಎಂದು ಪ್ರಶ್ನಿಸಿದರು.
ಜನರೆಲ್ಲಾ ಬೆಳಗ್ಗೆಯಿಂದ ಹಸಿದಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ಅನಾಹುತ ಆಗುವುದು ಬೇಡ. ಪ್ರತಿಭಟನೆಗೆ ಇಳಿಯುವುದಕ್ಕಿಂತಮುಖ್ಯಮಂತ್ರಿಗಳ ಬಳಿ ಮಾತುಕತೆ ನಡೆಸೋಣ ಎಂದು ವಿನಂತಿಸಿದ್ದೆ. ಯಾರದೋ ಪ್ರಚೋದನೆಯಿಂದಾಗಿ ಅಮಾಯಕರು ಲಾಠಿ ಏಟು ತಿನ್ನುವಂತಾಯಿತು. ಇಂಥ ಘಟನೆಗಳು ಆಗಬಾರದು. ಹಿಂಸೆಗೆ ಯಾರೂ ಅವಕಾಶ ಕೊಡಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು.