ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರಿನ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸದಸ್ಯರು ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣ ಮುಖ್ಯಮಂತ್ರಿ ಎಂದು ಘೋಷಿಸುವಂತೆ ಆಗ್ರಹಿಸಿ ಬುಧವಾರ ಪತ್ರ ಚಳುವಳಿ ನಡೆಸಿ ಆಗ್ರಹಿಸಿದರು.
ಮೈಸೂರು ನಗರದ ರಾಮಸ್ವಾಮಿ ವೃತ್ತದ ಬಳಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸದಸ್ಯರು ಒಗ್ಗೂಡಿ ಬಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ನಲ್ಲಿ ಬದಲಾಗುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಶಿವರಾಂ ನೇತೃತ್ವದಲ್ಲಿ ಸದಸ್ಯರು ಪತ್ರ ಚಳುವಳಿ ಮಾಡಿದರು.
ನಗರದ ರಾಮಸ್ವಾಮಿ ವೃತ್ತದಲ್ಲಿರುವ ಅಂಚೆ ಪೆಟ್ಟಿಗೆ ಬಳಿ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿ ಎಂದು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಆಗ್ರಹಿಸಿದರು.
ಈ ವೇಳೆ ಮುಖಂಡ ಕೆ.ಎಸ್.ಶಿವರಾಂ ಮಾತನಾಡಿ, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸಿಎಂ ಬದಲಾಗುತ್ತಾರೆ ಎಂದು ಗೊಂದಲ ಸೃಷ್ಟಿ ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಸಿದ್ದರಾಮಯ್ಯನವರ ವರ್ಚಸ್ಸಿಗೆ ಧಕ್ಕೆ ಉಂಟಾಗಲಿದೆ. 2023ರ ಅವಧಿಯಲ್ಲಿ ಸಿದ್ದರಾಮಯ್ಯನವರು ಎರಡೂವರೆ ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಉತ್ತಮ ಆಡಳಿತ ನಡೆಸಿದ್ದಾರೆ ಎಂದು ತಿಳಿಸಿದರು.
ಈ ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಸಿಎಂ ಕುರ್ಚಿಯ ಗೊಂದಲ ನಿವಾರಿಸಬೇಕು. ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂತ ಹೇಳಬೇಕು. ಹಿಂದಿನಿಂದಲೂ ಅಹಿಂದ ಸಮಾಜ ಕಾಂಗ್ರೆಸ್ ಪಕ್ಷದೊಂದಿಗಿದೆ. ಸಿದ್ದರಾಮಯ್ಯನವರನ್ನು ಬದಲಾಯಿಸದರೆ ಅಹಿಂದ ಸಮಾಜ ಕಾಂಗ್ರೆಸ್ ಜೊತೆ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.

