ಚಂದ್ರವಳ್ಳಿ ನ್ಯೂಸ್, ಬೆಳಗಾವಿ :
ಅಕ್ಟೋಬರ್-7ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮುದಾಯಕ್ಕೆ ನೀಡುವಂತೆ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಇಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಸೋಮವಾರ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ನಾಗೇಂದ್ರ ಮತ್ತು ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡುವಂತೆ ಈ ಹಿಂದೆಯೇ ಬೇಡಿಕೆ ಇಟ್ಟಿದ್ದೇವೆ. ಆದಷ್ಟು ಬೇಗನೆ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ತಿಳಿಸಿದ್ದೇವೆ.
ಮತ್ತೊಮ್ಮೆ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗದ ಮೂಲಕ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರಿಗೆ ಭೇಟಿಯಾಗಿ ಒತ್ತಡ ಹಾಕುತ್ತೇವೆ ಎಂದು ಜಾರಕಿಹೊಳಿ ತಿಳಿಸಿದರು.
ಸಿದ್ದರಾಮಯ್ಯ ಕಾರ್ಯವೈಖರಿ ಕುರಿತು ಮಾಜಿ ಸಚಿವ ರಾಜಣ್ಣ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದನ್ನು ನೀವು ಅವರನ್ನೇ ಕೇಳಬೇಕು. ನಾನು ಹೇಳುವುದಕ್ಕೆ ಆಗುವುದಿಲ್ಲ. ಅವರವರ ವರ್ಕಿಂಗ್ ಸ್ಟೈಲ್ ಹೇಗಿರಬೇಕು ಅಂತಾ ನಾವು ಹೇಳೋಕೆ ಆಗಲ್ಲ. ಅದು ಅವರ ವರ್ಕಿಂಗ್ ಸ್ಟೈಲ್ ಅಂತಾ ತಿಳಿಸಿದರು.
ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ ಅವರು, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಅಂತಾ ಹೇಳಿದ್ದಾರೆ. ಹೀಗಾಗಿ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ನಾವು ಭಾವಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಹೇಳಬೇಕಾಗುತ್ತದೆ ಎಂದು ಸಚಿವ ಸತೀಶ್ ತಿಳಿಸಿದರು.
ಡಿ.ಕೆ.ಶಿವಕುಮಾರ್ ಅವರ ಆಪ್ತರು ಮುಖ್ಯಮಂತ್ರಿ ಆಗಬೇಕು ಎಂದು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಇಲ್ಲ ಅಂತಾ ಹೇಳೋಕೆ ಆಗಲ್ಲ, ಗೊಂದಲ ಇದೆ. ಆ ಗೊಂದಲವನ್ನು ಸರಿಪಡಿಸುವ ಕೆಲಸವನ್ನು ಹೈಕಮಾಂಡ್ ಮಾಡಬೇಕು ಎಂದು ಸಚಿವರು ಹೇಳಿದರು.
ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಗಣತಿಯಲ್ಲಿ ಹೆಚ್ಚು ಮತ್ತು ಅನಗತ್ಯ ಪ್ರಶ್ನಾವಳಿವೆ ಅಂತಾ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಈ ವಿಚಾರ ನನ್ನ ಗಮನಕ್ಕೂ ಇದು ಬಂದಿದೆ. 60 ಪ್ರಶ್ನೆಗಳಿವೆ.
ಅವುಗಳಿಗೆ ಉತ್ತರಿಸಲು ಹಿಂದೇಟು ಹಾಕುತ್ತಿದ್ದಾರೆ. ನಾವು ಯಾಕೆ ನಮ್ಮ ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸಬೇಕು ಅಂತಾ ಕೆಲವರು ಪ್ರಶ್ನಿಸಿದ್ದಾರೆ. ಹಾಗಾಗಿ, ಪ್ರಶ್ನೆಗಳನ್ನು ಕಡಿಮೆ ಮಾಡಿದರೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.
ರಾಹುಲ್ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇನ್ನೂ ಚರ್ಚೆಯಲ್ಲಿದೆ. ಎಲ್ಲ ನಾಯಕರು ಕೂಡಿ ಚರ್ಚೆ ಮಾಡಿ, ನಿಲ್ಲಿಸಬೇಕೋ, ಬೇಡವೋ ಎಂಬುದನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ಮಾಡಿ ಪ್ರಕಟಿಸುತ್ತೇವೆ.
ಕನಿಷ್ಠ 10 ತಾಲೂಕುಗಳಲ್ಲಿ ಅವಿರೋಧ ಆಯ್ಕೆಗೆ ನಾವು ಪ್ರಯತ್ನಿಸುತ್ತಿದ್ದೇವೆ. ಇನ್ನುಳಿದಂತೆ ಐದು ತಾಲೂಕುಗಳಲ್ಲಿ ಸ್ಥಳೀಯ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಚುನಾವಣೆ ಆಗಲಿದೆ. ಆದರೂ ಇನ್ನಷ್ಟು ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಗೆ ಕೊನೆವರೆಗೂ ಪ್ರಯತ್ನ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದರು.

