ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಹೌಸಿಂಗ್ ಬೋರ್ಡ್ ಕೆಲ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ದಿಢೀರ್ ದಾಳಿ ಮಾಡಿರುವ ಘಟನೆ ನಡೆದಿದೆ.
ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ)ಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸೇರಿದಂತೆ ಇಬ್ಬರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಇಬ್ಬರು ಅಧಿಕಾರಿಗಳು ಅಕ್ರಮವಾಗಿ ಸೈಟ್ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ಮಾಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ.
ಕೆಹೆಚ್‌ಬಿಯ ಯಲಹಂಕ ನ್ಯೂಟೌನ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೈಯದ್ ಅಸ್ಗರ್ ಹಾಗೂ ಗೋವಿಂದಯ್ಯ ಎಂಬವರ ಕಚೇರಿ ಸೇರಿದಂತೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ದೂರು?: ಯಲಹಂಕ ನ್ಯೂಟೌನ್‌ನ ಸೈಟ್ ನಂಬರ್ 271A ಸೆಕ್ಟರ್‌ಗೆ ಸಂಬಂಧಿಸಿದಂತೆ ಇಂಜಿನಿಯರ್ ಸೈಯದ್ ಅಸ್ಗರ್ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು 10 ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಿ ಕೆ. ಎಸ್. ಚಂದ್ರಶೇಖರ ಆಜಾದ್ ಎಂಬವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಅಕ್ರಮಗಳ ಸಂಬಂಧ ಸೈಯದ್ ಅಸ್ಗರ್, ಗೋವಿಂದಯ್ಯ ಹಾಗೂ ಸತೀಶ್ ಹರಿಣಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಯಲಹಂಕ ನ್ಯೂಟೌನ್‌ನ ಕೆಹೆಚ್‌ಬಿ ಕಚೇರಿ, ಆರ್.ಟಿ. ನಗರದಲ್ಲಿರುವ ಸೈಯದ್ ಅಸ್ಗರ್ ನಿವಾಸ ಹಾಗೂ ಗೋವಿಂದಯ್ಯ ನಿವಾಸದಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.