ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿದ್ರೆ ಮಂಪರಿನಲ್ಲಿದ್ದ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ನಡೆಸಿ ಬೆಚ್ಚೆಬೀಳಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 8 ಮಂದಿ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಗದಗ ಬೆಟಗೇರಿ ನಗರಸಭೆಯ ಇಂಜಿನಿಯರ್ಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ನಡೆದಿದೆ.
ಯಾರ್ಯಾರ ಅಧಿಕಾರಿಗಳ ಮನೆ ಮೇಲೆ ದಾಳಿ-
ಖಾನಾಪುರ ತಹಶೀಲ್ದಾರ್, ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್ಮೆಂಟ್ ಜಂಟಿ ನಿರ್ದೇಶಕಿ ಶೋಭಾ ಸೇರಿದಂತೆ ಎಂಟು ಜಿಲ್ಲೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾರ್ಯನಿರ್ವಾಹಕ ಎಂಜಿನಿಯರ್ಗೆ ಶಾಕ್-
ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ಬೆಳಗಾವಿಯಲ್ಲಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್ ಹೆಚ್ ಲೋಕೇಶ್ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ರಾಮಾಂಜನೇಯ ನಗರದ ನಿವಾಸ, ಕಚೇರಿ ಹಾಗೂ ಸ್ನೇಹಿತರ ನಿವಾಸದ ಮೇಲೂ ರೇಡ್ ಮಾಡಲಾಗಿದೆ. ಇನ್ನು ಅಕ್ರಮ ಆಸ್ತಿ ಗಳಿಕೆ ಕುರಿತು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಇತ್ತ ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕುಟುಂಬ ಕಲ್ಯಾಣ ಇಲಾಖೆಯ ಡಾ. ಎಸ್ ಎನ್ ಉಮೇಶ್ ಮತ್ತು ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇನ್ಸ್ಪೆಕ್ಟರ್ ರವೀಂದ್ರ ಅವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಹಶಿಲ್ದಾರ ಪ್ರಕಾಶ್ ಶ್ರೀಧರ್ ಗಾಯಕವಾಡ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೂ.ಇಂಜಿನಿಯರ್ ಹುಲಿರಾಜ್, ತುಮಕೂರು ಜಿಲ್ಲೆಯ ನಿವೃತ್ತ ಆರ್ಟಿಓ ಅಧಿಕಾರಿ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದು ಮಾಹಿತಿ ಸಂಗ್ರಹದಲ್ಲಿ ಲೋಕಾಯುಕ್ತ ಅಧಿಕಾರಿಗಳು ತೊಡಗಿದ್ದಾರೆ.