ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಗರದ ಶ್ರೀ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಭಾಷೆಯು ಒಂದು.. ಕನ್ನಡ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಸಂಸ್ಕೃತಿ ನಮ್ಮ ಉಸಿರು. ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 51000 ಅತಿಥಿ ಶಿಕ್ಷಕರನ್ನು ಒಂದೇ ಬಾರಿಗೆ ನೇಮಕ ಮಾಡಿಕೊಳ್ಳಲಾಗಿದೆ.
ಅತಿಥಿ ಶಿಕ್ಷಕರ ಗೌರವ ಧನವನ್ನು 2000 ರೂ.ಗಳಿಗೆ ಹೆಚ್ಚಿಸಿದೆ. 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಮೂರು ಪರೀಕ್ಷಾ ಮಾದರಿಯನ್ನು ಪರಿಚಯಿಸಿದ್ದರಿಂದ ಶೇಕಡಾ 79.71ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪಿ.ಯು.ಸಿಯಲ್ಲಿ ಶೇಕಡಾ 85.19ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದರು.
ಶಾಲಾ ಕೊಠಡಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ರೂ, 850 ಕೋಟಿಗಳ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇಲಾಖೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಿತದೃಷ್ಠಿಯಿಂದ ದಿನಾಂಕ: 14-11-2025ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮೆಗಾ ಪೋಷಕರ-ಶಿಕ್ಷಕರ ಸಭೆಯನ್ನು ಏಕಕಾಲಕ್ಕೆ ನಡೆಸಲಾಗುವುದು ಎಂದರು.
2026-27ನೇ ಶೈಕ್ಷಣಿಕ ಸಾಲಿನಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ 07 ಸರ್ಕಾರಿ ಶಾಲೆಗಳ ಆವರಣದಲ್ಲಿ ಹೆಚ್ಚುವರಿಯಾಗಿ ಕನ್ನಡ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸಲು ಹಾಗೂ 02 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಗೆ ಸಂಪೂರ್ಣ ಆದ್ಯತೆ ನೀಡಲಾಗುವುದು ಎಂದರು.
ವಿವಿಧ ಶಾಲಾ ಮಕ್ಕಳು ಪಥಸಂಚಲನ ಮಾಡಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪ್ರಮಾಣಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸ್ವಾಗತಿಸಿದರು ಹಾಗೂ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಬಿ.ಆರ್.ಪಾಟೀಲ್, ಗೋವಿಂದರಾಜು ಹಾಗೂ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷ ಡಾ.ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು.

