ಇ-ಖಾತೆ ಮಾಡಿಸುವುದು ಕಡ್ಡಾಯ, ಆದರೆ ಡೆಡ್ ಲೈನ್ ವಿಧಿಸಿಲ್ಲ-ಕೃಷ್ಣ ಭೈರೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿವೇಶನಗಳ ಇ-ಖಾತೆ ಮಾಡಿಸುವುದು ಕಡ್ಡಾಯ. ಆದರೆ ಯಾವುದೇ ಡೆಡ್ ಲೈನ್ ವಿಧಿಸಿಲ್ಲ. ಹೀಗಾಗಿ ಸಾರ್ವಜನಿಕರು ಆತುರ ಪಡುವ ಅಗತ್ಯ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದರು.

ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಸಚಿವರು ಮಾತನಾಡಿದರು. ನಿವೇಶನ ಖರೀದಿ ಮತ್ತು ಮಾರಾಟದಲ್ಲಿ ವ್ಯಾಪಕವಾಗಿ ವಂಚನೆ ಮಾಡಲಾಗುತ್ತಿದ್ದು ಈ ವಂಚನೆ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇ.ಖಾತೆ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ. ಆದರೆ, ಇ-ಖಾತೆ ಮಾಡಿಸಲು ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ ಎಂದು ಅವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾಗೆ ಸರ್ಕಾರ ಸಮಯ ನಿಗದಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ, ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಸಾರ್ವಜನಿಕರಲ್ಲಿನ ಗೊಂದಲಕ್ಕೆ ತೆರೆ ಎಳೆದರು.

ನೋಂದಣಿಯಲ್ಲಿ ಅಕ್ರಮ ತಡೆಯಲು ಮತ್ತು ನಕಲಿ ನೋಂದಣಿ ಪ್ರಕರಣಗಳಿಗೆ  ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆ ಜಾರಿಗೆ ತರಲಾಗಿದೆ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಸಾರ್ವಜನಿಕರು ಇ-ಖಾತಾ ಪಡೆಯಲು ಕಚೇರಿಗಳಿಗೆ ಬಂದು ಅಲೆಯುವ ಅಗತ್ಯವಿಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು. ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

 ಇ-ಖಾತಾ ಪಡೆಯಲು ಆಸ್ತಿ ಮಾಲೀಕರು ಕೆಲವು ದಾಖಲೆಗಳನ್ನು ನೀಡುವುದು ಅಗತ್ಯವಾಗಿದ್ದು, ಅವುಗಳನ್ನು ʼಬೆಂಗಳೂರು ಒನ್ʼ ಕಚೇರಿಗಳ ಮುಖಾಂತರ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಇ-ಖಾತೆ ಪಡೆದುಕೊಳ್ಳಬಹುದು ಎಂದು ಹೇಳಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ನಕಲಿ ನೋಂದಣಿಗಳನ್ನು ತಪ್ಪಿಸಿ, ಆಸ್ತಿ ಮಾಲೀಕರ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ. ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಗೆ ಒಳಗಾಗದೆ ತನ್ನ ಆಸ್ತಿ ರಕ್ಷಿಸಿಕೊಳ್ಳಬಹುದು ಎಂದರು.

ಒಂದು ಬಾರಿ ಇ-ಖಾತಾ ವ್ಯವಸ್ಥೆ ಅನುಷ್ಠಾನ ಮಾಡಿದರೆ, ಇಡೀ ದೇಶದಲ್ಲಿ ಅತ್ಯುತ್ತಮ ಮಾದರಿ ಖಾತಾ ವ್ಯವಸ್ಥೆ ನೀಡಿದಂತಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ ಎಂದರು.

 

 

- Advertisement -  - Advertisement -  - Advertisement - 
Share This Article
error: Content is protected !!
";