ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಉಗ್ರರ ದಾಳಿಯಲ್ಲಿ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಮೃತಪಟ್ಟಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಿದ್ದೇನೆ.
ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಲಾಡ್ ಅವರಿಗೆ ಸೂಚಿಸಿದ್ದೇನೆ. ಮೃತದೇಹ ತರಲು ಕೇಂದ್ರ ಸರ್ಕಾರವೇ ವಿಮಾನ ವ್ಯವಸ್ಥೆ ಮಾಡಿದೆ. ಪ್ಲ್ಯಾನ್ ಮಾಡಿಯೇ ಉಗ್ರರು ದಾಳಿ ಮಾಡಿದ್ದಾರೆ. ಇದರಲ್ಲಿ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯವಿದೆ.
ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುತ್ತೇನೆ. ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಉಗ್ರರನ್ನು ಮಟ್ಟ ಹಾಕುವ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದರು.