ವಸತಿ ಶಾಲೆ ಮಕ್ಕಳಿಗೆ ಆಯುಷ್ ಕಿಟ್ ವಿತರಣೆ ಮಾಡಿದ ಸಚಿವ ಡಿ.ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹರಿದ್ರಾಕಾಂಡ ಗ್ರಾನ್ಯೂಲ್ಸ್, ದೇಹ ಪುಷ್ಠಿಗೆ ಪೂರಕವಾದ ಚ್ಯವನ ಪ್ರಾಶ ಹಾಗೂ ನೆನಪಿನ ಶಕ್ತಿ ಹೆಚ್ಚಿಸುವ ಕೂಷ್ಮಾಂಡಾವಲೇಹ್ಯ ಒಳಗೊಂಡಿರುವ ವಿದ್ಯಾರ್ಥಿ ಚೇತನ ಆಯುಷ್ ಕಿಟ್ಅನ್ನು ವಸತಿ ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.

 ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಷ್ಮಾನ್ ಭಾರತ್ ಯೋಜನೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳಡಿಯಲ್ಲಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮವನ್ನು ಚಿತ್ರದುರ್ಗ ತಾಲ್ಲೂಕಿನ ಬೊಮ್ಮೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಆಯುಷ್ ಕಿಟ್ ನೀಡುವ ಮೂಲಕ ಜಿಲ್ಲಾಮಟ್ಟದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.

ಜಿಲ್ಲಾ ಆಯುಷ್ ಇಲಾಖೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚೇತನಎನ್ನುವ ಆಯುಷ್ ಸೇವಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ 9 ವಸತಿ ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ನಾಲ್ಕು ತಿಂಗಳುಗಳ ಕಾಲ ನಿಯಮಿತವಾಗಿ ಆಯುಷ್ ವೈದ್ಯಾಧಿಕಾರಿಗಳು ಭೇಟಿ ನೀಡಿ ವೈದ್ಯಕೀಯ ತಪಾಸಣೆ ಮಾಡಿ, ಔಷಧಿ ಸಸ್ಯಗಳ ಪರಿಚಯ, ಮನೆ ಮದ್ದು ಅರಿವು, ಸದೃಢ ಆರೋಗ್ಯಕ್ಕಾಗಿ ಉತ್ತಮ ಜೀವನ ಶೈಲಿ, ರೋಗ ನಿರೋಧಕ ಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಿಸಲು ಅನುಸರಿಸಬೇಕಾದ ವಿಧಾನಗಳ ಇತ್ಯಾದಿ ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ.

 ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರಿಗೆ, ಇತರೆ ಗಣ್ಯರಿಗೆ, ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಖರ್ಜೂರಾದಿ ಮಂಥ ಪಾನೀಯ ನೀಡಿದರು. ಸ್ವೀಕರಿಸಿದವರೆಲ್ಲರೂ ಉತ್ತಮ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಸೇರಿದಂತೆ ಇತರೆ ಗಣ್ಯರು, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಕಚೇರಿ ಸಿಬ್ಬಂದಿ ಇದ್ದರು.

 

 

 

- Advertisement -  - Advertisement -  - Advertisement - 
Share This Article
error: Content is protected !!
";