ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ 2025-28ನೇ ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರ ಬೇಡಿಕೆಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದು, ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ಶಾಸಕರು ಸಹಕಾರ ನೀಡಲಿದ್ದೇವೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾರಂಗಕ್ಕೆ ತಪ್ಪುಗಳ ಮೇಲೆ ಬೆಳಕು ಚೆಲ್ಲುವ ಶಕ್ತಿ ಇದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಉತ್ತಮವಾಗಿ ಪತ್ರಕರ್ತರ ಕಾರ್ಯನಿರ್ಸುತ್ತಿದ್ದು, ಪತ್ರಕರ್ತರ ಕ್ಷೇಮ ನಿಧಿಗೆ ರೂ. 3ಲಕ್ಷ ನೀಡಲಾಗುವುದು ಎಂದು ಸಚಿವರು ಘೋಷಿದರು.
2026 ಜನವರಿಗೆ ಭದ್ರಾ ನೀರು ನೀರು ಹರಿಸಲು ಕ್ರಮ: 2026ರ ಜನವರಿ ಮಾಹೆಯಲ್ಲಿ ಜಿಲ್ಲೆಗೆ ಭದ್ರ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಡಿ ಸುಧಾಕರ್ ತಿಳಿಸಿದರು.
ಇದೇ ಡಿಸೆಂಬರ್ ಮಾಹೆ ಒಳಗೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನವರಿ ಮಾಹೆಯಲ್ಲಿ ನೀರು ಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
.ಹೊಳಲ್ಕೆರೆ ಕ್ಷೇತ್ರದ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಸಮಾಜದ ಒಳಿತಿಗಾಗಿ ಹಗಲಿರುಳು ಶ್ರಮವಹಿಸಿ ಕೆಲಸ ಮಾಡುವ ಪತ್ರಕರ್ತರ ಕ್ಷೇಮಕ್ಕಾಗಿ ೩ ಲಕ್ಷ ನೀಡುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಪತ್ರಕರ್ತರಿಗೆ ಅಗತ್ಯವಾಗಿ ಬೇಕಾದ ಕೆಲಸಗಳನ್ನು ಮಾಡಿಕೊಡಲು ಜಿಲ್ಲಾ ಸಚಿವರ ಜತೆ ನಾನು ಕೂಡ ಕೈಜೋಡಿಸಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ದಿಕ್ಸೂಚಿ ಭಾಷಣ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕ್ರಿಮಿನಲ್ ಪತ್ರಕರ್ತರು, ಸುಳ್ಳು ಪತ್ರಕರ್ತರು, ಬ್ಲಾಕ್‌ಮೇಲ್ ಮಾಡುವ ಪತ್ರಕರ್ತರನ್ನು ಈ ವ್ಯವಸ್ಥೆಯಿಂದ ಹೊರಹಾಕುವ ಕೆಲಸ ಮಾಡಬೇಕಿದೆ. ಇಲ್ಲವಾದಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಘನತೆ, ಗೌರವ ಇರುವುದಿಲ್ಲ, ಈ ನಿಟ್ಟಿನಲ್ಲಿ ರಾಜ್ಯ ಸಂಘ ಮುಂದಾಗಿದೆ. ಜಿಲ್ಲಾ ಸಂಘವು ಇದಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಸಂಘದ ನೂತನ ಜಿಲ್ಲಾಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳ್ ಮಾತನಾಡಿ, ಹಿಂದಿನ ಅಧ್ಯಕ್ಷರಂತೆ ಸಂಘಕ್ಕೆ ಯಾವುದೇ ಚ್ಯುತಿ ಬಾರದಂತೆ, ಹಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಮುನ್ನೆಡೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಕಾರಿ ರವಿಕುಮಾರ್ (ಟೆಲೆಕ್ಸ್), ಸಂಘದ ಜಿಲ್ಲಾ ಮುಖ್ಯ ಚುನಾವಣಾಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ, ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಡಿವೈಎಸ್‌ಪಿ ಪಿ.ಕೆ.ದಿನಕರ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ವೀರೇಶ್ ಅಪ್ಪು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಸಿದ್ದರಾಜು, ನೂತನ ಪದಾಧಿಕಾರಿಗಳು, ನಾನಾ ಸಂಘಟನೆಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ನೂತನ ಪದಾಕಾರಿಗಳಿಗೆ ಪ್ರಮಾಣ ವಚನ ಬೋಸಿದರು.

