ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರವು ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಗೆ ಚಾಲನೆ ನೀಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದವೇಳೆ ವಿಧಾನಸಭೆ ಶಾಸಕರಾದ ಸಿಮೆಂಟ್ ಮಂಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು 400 ಪಶು ವೈದ್ಯಾಧಿಕಾರಿಗಳ ಖಾಯಂ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರು ಮತ್ತು ಸಿಬ್ಬಂದಿ ವರ್ಗದ ಹುದ್ದೆಗಳ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿರುವುದರಿಂದಲೇ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಹಾಗೂ 300 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿತ್ತು. ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿ ಇರುವುದಾಗಿ ತಿಳಿಸಿದರು.
ಹುದ್ದೆಗಳ ಕೊರತೆ ಇದ್ದರೂ ಕೂಡ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಲಭ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಧಿಕ ಪ್ರಭಾರದಲ್ಲಿರಿಸಿ, ರೈತರ ಜಾನುವಾರುಗಳಿಗೆ ಸಂಚಾರಿ ಪಶುಚಿಕಿತ್ಸಾಲಯ ವಾಹನದ (1962 ಸಹಾಯವಾಣಿ) ಸೌಲಭ್ಯದೊಂದಿಗೆ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ವಿಳಂಬವಾಗದಂತೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

