ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ. ಜಿಲ್ಲೆ:
ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.
ಸ್ವತಃ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಸಚಿವರು ಸಂತಸ ವ್ಯಕ್ತಪಡಿಸಿದರು. ನಂತರ ಮಾತನಾಡಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಬೋಟಿಂಗ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ದೋಣಿ ವಿಹಾರಿಗಳಿಗೆ ಲೈಫ್ ಜಾಕೆಟ್ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಬೋಟಿಂಗ್ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಗನ್ನಾಥ, ಕೆ.ಸಿ ಮಂಜುನಾಥ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

