ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26 ನೇ ಸಾಲಿನಲ್ಲಿ ಮಾರ್ಚ್ 2025 ರಿಂದ ನವೆಂಬರ್ 2025ರವರೆಗೆ 03 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು ರೂ. 60,49,75,549 ಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿರುತ್ತದೆ ಎಂದರು.
ಪಿಡಿಓ ಮೇಲೆ ಕ್ರಮ: ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗ್ಯವತಿ ಅಗ್ನಿಮಠ ಅವರು ದಿ.13.10.2025 ರಂದು ಮೃತಪಟ್ಟಿದ್ದಾರೆ. ಇವರಿಗೆ 2 ತಿಂಗಳ ವೇತನ ಪಾವತಿಯು ಗ್ರಾಮ ಪಂಚಾಯತಿ ಹಂತದಲ್ಲಿ ವಿಳಂಬವಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

