ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಜರುಗಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.