ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು:
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ   ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ  ಉತ್ತರಿಸಿದ ಸಚಿವರು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ   ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ 15000 ಹಾಗೂ ರೂ.16000 ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯು ದಿನಾಂಕ:13.6.2022 ರಲ್ಲಿ ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆ ಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ದಿನಾಂಕ:25.3.2024 ರಂದು ಹಿಂಬರಹ ನೀಡಿದೆ.

ಆದರೆ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗುವುದು ಎಂದರು.
ಅತಿಥಿ ಶಿಕ್ಷಕರು /ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

 

 

- Advertisement -  - Advertisement - 
Share This Article
error: Content is protected !!
";