ಜಿಲ್ಲಾಧಿಕಾರಿಗಳ ಕಚೇರಿಗೆ ವೈದ್ಯಕೀಯ ಕಾಲೇಜು ಸ್ಥಳಾಂತರಕ್ಕೆ ವೈದ್ಯಕೀಯ ಶಿಕ್ಷಣ ಸಚಿವರ ಸಮ್ಮತಿ-ಸಚಿವ ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಹೊರವಲಯದಲ್ಲಿನ ಕುಂಚಿಗನಾಳು ಬಳಿ ನಿರ್ಮಿಸಲಾಗುತ್ತಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಬಳಸಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸಮ್ಮತಿ ಸೂಚಿಸಿದ್ದು
, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯೋಜನಾ ಹಾಗೂ ಸಾಂಖ್ಯಿಕ ಸಚಿವರು ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

- Advertisement - 

ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ವಿವಿಧ ವಿಭಾಗಗಳ ಬಳಕೆಗಾಗಿ ನಿರ್ಣಯ ಕೈಗೊಳ್ಳಲಾಗಿದ್ದುವೈದ್ಯಕೀಯ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು, ವೈದ್ಯಕೀಯ ಕಾಲೇಜು ಸ್ಥಳಾಂತರ ಸಂಬಂಧ ಈಗಾಗಲೇ ಆದೇಶ ಹೊರಡಿಸಿದ್ದಾರೆ.   ವೈದ್ಯಕೀಯ ಶಿಕ್ಷಣ ಇಲಾಖೆಯ ಪರಿಣಿತ ಅಧಿಕಾರಿಗಳ ಸಮಿತಿಯು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ  ಕೈಗೊಳ್ಳಲಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಈ ಕುರಿತು ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚಿಸಿದ್ದಾರೆ.

ವೈದ್ಯಕೀಯ ಕಾಲೇಜಿಗೆ ಬಳಸಲು ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಕೂಡಲೇ ವೈದ್ಯಕೀಯ ಕಾಲೇಜನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

- Advertisement - 

ಸಿಎಂಸಿಆರ್‍ಐ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಮಾತನಾಡಿ, ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಜ್ಞಾನಗಂಗೋತ್ರಿ ಆವರಣದಲ್ಲಿ 2023-24 ರಲ್ಲಿ 03 ಕೊಠಡಿಗಳನ್ನು ಎಂ.ಒ.ಯು ಮೂಲಕ ಪಡೆದಿದ್ದು, ಇನ್ನೂ ಹೆಚ್ಚಿನ 09 ಕೊಠಡಿಗಳು ದಾವಣಗೆರೆ ವಿಶ್ವವಿದ್ಯಾಲಯದಿಂದ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಕೋರಿದರು.

ಎಂಬಿಬಿಎಸ್ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಕ್ಕಾಗಿ ಬಸ್‍ಗಳು ಇಲ್ಲದೇ ಇರುವುದರಿಂದ ಈ ಸಂಸ್ಥೆಗೆ ಕನಿಷ್ಠ 04 ಬಸ್‍ಗಳು ಅವಶ್ಯಕವಾಗಿದ್ದು ಪೂರೈಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದಾಗ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಡಿಎಂಎಫ್ ಅಥವಾ ಸಿಎಸ್‍ಆರ್ ಅನುದಾನದಲ್ಲಿ ಚಿತ್ರದುರ್ಗ ವೈದ್ಯಕೀಯ ಸಂಸ್ಥೆಗೆ 04 ಬಸ್‍ಗಳನ್ನು ಒದಗಿಸಲು ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಸಚಿವರ ಸಹಮತದಿಂದ ನಿರ್ಣಯ ಕೈಗೊಳ್ಳಲಾಯಿತು. ಈ ಕುರಿತು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಬಸ್‍ಗಳನ್ನು ಒದಗಿಸುವ ಬಗ್ಗೆ ಸಹಮತ ವ್ಯಕ್ತಪಡಿಸಿದರು.

ಚಿತ್ರದುರ್ಗ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸುತ್ತಿರುವ ಹಾಸ್ಟೆಲ್ ಕಟ್ಟಡದ 03 ಅಂತಸ್ತುಗಳು ಸಂಪೂರ್ಣವಾಗಿ ನಿರ್ಮಾಣಗೊಂಡಿದ್ದು, ಒಂದು ವಾರದೊಳಗಾಗಿ ಹಸ್ತಾಂತರಿಸುವುದಾಗಿ ಕಾರ್ಯಪಾಲಕ ಅಭಿಯಂತರರು ಸಭೆಯಲ್ಲಿ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳು ಈ ಸಂಬಂಧವಾಗಿ ಹಾಲಿ ಸ್ನಾತಕೋತ್ತರ ಕೇಂದ್ರದ ಮೇಲ್ಮಹಡಿಯಲ್ಲಿ ಖಾಲಿ ಇರುವ ಜಾಗದಲ್ಲಿ ಪ್ರಯೋಗಶಾಲೆ ಹಾಗೂ ಬೋಧನಾ ಕೊಠಡಿಗಳನ್ನು ನಿರ್ಮಿಸಿಕೊಳ್ಳಬಹುದೆಂದು ಅಭಿಪ್ರಾಯಪಟ್ಟರು. ಆಗ ಸಭೆಯಲ್ಲಿ ವಿಕಲಚೇತನರಿಗೆ ಲಿಫ್ಟ್ ಇಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಕಷ್ಟಕರವಾಗುತ್ತದೆ ಎಂದು ತಿಳಿಸಿದರು.

ಈ ಸಂಬಂಧ ಅಭಿಯಂತರರೊಂದಿಗೆ ಚರ್ಚಿಸಲು ತಿಳಿಸಲಾಯಿತು. ಸಿ.ಎಂ.ಸಿ.ಆರ್.ಐ. ಚಿತ್ರದುರ್ಗ ಸಂಸ್ಥೆಯ ಬಗ್ಗೆ ಯಾವುದೇ ಕುಂದು ಕೊರತೆಗಳು ಇದ್ದರೂ ನಿರ್ದೇಶಕರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಚಳ್ಳಕೆರೆ ಶಾಸಕರಾದ ರಘುಮೂರ್ತಿ ಸಹಮತ ವ್ಯಕ್ತವಡಿಸಿ ಸಿ.ಎಂ.ಸಿ.ಆರ್.ಐ ಚಿತ್ರದುರ್ಗ ಸಂಸ್ಥೆಗೆ ಸ್ಪಂದಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು, ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಉಪಕುಲಪತಿ ಡಾ.ಭಗವಾನ್, ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿಯವರು ಸಭೆಯಲ್ಲಿ ಇದ್ದರು.

 

Share This Article
error: Content is protected !!
";