ಶಾಸಕ ಗಾಲಿ ಜನಾರ್ದನ ರೆಡ್ಡಿ ಜಾಮೀನು ಮಂಜೂರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:‌
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು
, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.

- Advertisement - 

ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್‌, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಗಾಲಿ ಜನಾರ್ದನ ರೆಡ್ಡಿ ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.

- Advertisement - 

ಕಳೆದ ತಿಂಗಳ ಮೇ 6 ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ಅಂತಿಮ ತೀರ್ಪು ನೀಡಿ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು.
ಜನಾರ್ದನ ರೆಡ್ಡಿ ಜತೆಗೆ
, ಶ್ರೀನಿವಾಸ್ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಕೂಡ ತಪ್ಪಿತಸ್ಥರೆಂದು ಸಾಬೀತಾಗಿತ್ತು. ತೀರ್ಪು ಪ್ರಶ್ನಿಸಿ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಅರ್ಜಿಯ ವಾದಗಳನ್ನು ಮಂಗಳವಾರ ಆಲಿಸಿದ್ದ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ನೀಡಿ ತೀರ್ಪು ನೀಡಿದ್ದಾರೆ.ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

- Advertisement - 

ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ.

2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು.

 

Share This Article
error: Content is protected !!
";