ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ ಅವರ ಸುಮಾರು 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಿಳಿಸಿದೆ.
ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ, ಒಂದು ಕಟ್ಟಡ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಮುಟ್ಟುಗೋಲು ಹಾಕಿಕೊಂಡಿರುವ ಈ ಆಸ್ತಿಗಳನ್ನು ಪಿಎಂಎಲ್ಎ ಅಡಿಯಲ್ಲಿ ಅಪರಾಧದ ಆದಾಯ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಜಾರಿ ನಿರ್ದೇಶನಾಲಯದ ಪ್ರಕಾರ, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳ ಹಣವನ್ನು ಬೇರೆಡೆಗೆ ತಿರುಗಿಸಿ ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು.
ನಂತರ ಶೆಲ್ ಘಟಕಗಳ ಮೂಲಕ ಅಕ್ರಮವಾಗಿ ವರ್ಗಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಸಂಬಂಧ ಕರ್ನಾಟಕ ಪೊಲೀಸರು ಮತ್ತು ಸಿಬಿಐ ಎಫ್‌ಐಆರ್‌ದಾಖಲಿಸಿದ್ದವು. ಅವುಗಳ ತನಿಖೆ ವೇಳೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಉದ್ಭವಿಸಿದೆ ಎನ್ನಲಾಗಿದೆ.
ವಾಲ್ಮೀಕಿ ಅಭಿೃದ್ಧಿ ನಿಗಮ ಹಗರಣದಲ್ಲಿ ಶಾಸಕ ಬಿ ನಾಗೇಂದ್ರ ಜೈಲು ಪಾಲಾಗಿದ್ದು ನಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.

