ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸೆಪ್ಟಂಬರ್ 08 ರಂದು ಏಕಕಾಲಕ್ಕೆ ಜಿಲ್ಲೆಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ
ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ 03 ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ತಿಳಿಸಿದ್ದಾರೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆಯಾ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು.
ಪ್ರತಿ ವಿಭಾಗಕ್ಕೂ ಪ್ರತ್ಯೇಕವಾಗಿ ಪ್ರಥಮ- ರೂ. 3000, ದ್ವಿತೀಯ- ರೂ. 2000 ಹಾಗೂ ತೃತೀಯ- ರೂ. 1000 ನಗದು ಬಹುಮಾನ ಇರುತ್ತದೆ. ಪ್ರಥಮ ಬಹುಮಾನ ಪಡೆದ ಪ್ರಬಂಧಗಳನ್ನು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ. 31,000, ದ್ವಿತೀಯ- ರೂ. 21,000 ಹಾಗು ತೃತೀಯ- 11,000 ರೂ. ಬಹುಮಾನವಿರುತ್ತದೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಸ್ಪರ್ಧೆಯ ಕುರಿತು ಸಾಕಷು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು.
ಪ್ರೌಢಶಾಲಾ ವಿಭಾಗದ ಸ್ಪರ್ಧೆ ವಿಷಯಗಳು ಇಂತಿದೆ. ಸ್ವಚ್ಛತೆಯ ಪಾಠ- ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, ಗಾಂಧೀಜಿಯವರ ಸ್ವಾತಂತ್ರ್ಯದ ಕನಸು- ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿನ ವಿಷಯಗಳು ಇಂತಿವೆ. ಅಸ್ಪøಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೊರಾಟ. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ. ಬದಲಾವಣೆ ನನ್ನಿಂದಲೇ ಆರಂಭ- ಗಾಂಧೀಜಿಯವರ ಪಾಠ. ಈ ವಿಷಯಗಳ ಪೈಕಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿಷಯಗಳು ಇಂತಿದೆ. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ. ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್- ತತ್ವಗಳ ಹೋಲಿಕೆ. ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ. ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

