ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಸಂಬಂಧ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಾದ-ಪ್ರತಿವಾದ ಪೂರ್ಣಗೊಳಿಸಿ ತೀರ್ಪಿಗೆ ಆದೇಶ ಕಾಯ್ದಿರಿಸಿತು.
ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ ಸಿಂಗ್ ವಾದ ಮಂಡಿಸಿ, ಮುಡಾ ಹಗರಣ ಕುರಿತ ಪ್ರಕರಣದಲ್ಲಿ ಸರ್ಕಾರದಲ್ಲಿರುವ ಹಿರಿಯ ವ್ಯಕ್ತಿಗಳು ಆರೋಪಿಯಾಗಿರುವುದರಿಂದ ರಾಜ್ಯ ಸರ್ಕಾರದ ಅಧೀನದ ಸಂಸ್ಥೆ ವಿಚಾರಣೆ ನಡೆಸಿದರೂ ಸತ್ಯಾಂಶ ಹೊರಬರುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿದರು.
ಸರ್ಕಾರದ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ, ಕಪಿಲ್ ಸಿಬಲ್ ಅವರು ಇದಕ್ಕೆ ಆಕ್ಷೇಪಿಸಿದರು. ಎಲ್ಲ ಪ್ರಕರಣಗಳು ಸಿಬಿಐಗೆ ವಹಿಸಬೇಕು ಎಂದರೆ ಲೋಕಾಯುಕ್ತ ಕಾರ್ಯ ನಿರ್ವಹಿಸುವುದಾದರೂ ಏಕೆ? ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಲೋಕಾಯುಕ್ತಕ್ಕೆ ಅಧಿಕಾರವಿದೆ. ಆ ಅಧಿಕಾರವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಪೀಠಕ್ಕೆ ತಿಳಿಸಿದರು.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು. ಇದೇ ಸಂದರ್ಭದಲ್ಲಿ ತೀರ್ಪು ಪ್ರಕಟಿಸುವವರೆಗೆ ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಗೆ ನ್ಯಾಯಾಲಯ ಕಾಲಾವಕಾಶ ವಿಸ್ತರಿಸಿತು.
ಈ ವಿಚಾರಣೆ ವೇಳೆ, ಲೋಕಾಯುಕ್ತ ಪರ ವಕೀಲ ವೆಂಕಟೇಶ್‌ಅರಬಟ್ಟಿ ಅವರು ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದು, ಅದನ್ನೂ ನ್ಯಾಯಾಲಯ ದಾಖಲಿಸಿಕೊಂಡಿತು.

