ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ.
ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್‌ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ.
ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ ಎಂದು ಹಿರಿಯ ಉಪಾಧ್ಯಕ್ಷ ಗುರುರಾಜ್ ಹೂಗಾರ್, ಉಪಾಧ್ಯಕ್ಷ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

