ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಯಲ್ಲಿ ಬಡವರು, ವಿಕಲಚೇತನರು, ವೃದ್ಧರು ಹಾಗೂ ವಿಧವೆಯರಿಗೆ ಕಳೆದ 6-7 ತಿಂಗಳುಗಳಿಂದ ಮಾಸಾಶನ (ಪಿಂಚಣಿ) ನೀಡದೆ ಸ್ಥಗಿತಗೊಳಿಸಿರುವ ಕಾಂಗ್ರೆಸ್ ಸರ್ಕಾರದ ವಿರೋಧಿ ಧೋರಣೆಯನ್ನು ಖಂಡಿಸಿ, ಚಿಕ್ಕಮಗಳೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಸಿ.ಟಿ. ರವಿ ಅವರು, "ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 67,000ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಮಾಸಾಶನ ಸಿಗದೆ ಸಂಕಷ್ಟದಲ್ಲಿದ್ದಾರೆ. ಜನಸಾಮಾನ್ಯರು ಪಿಂಚಣಿ, ವಸತಿ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಕಣ್ಣೀರು ಹಾಕುತ್ತಿದ್ದರೆ, ರಾಜ್ಯ ಸರ್ಕಾರ ಉತ್ಸವ-ಸಂಭ್ರಮಾಚರಣೆಗಳಲ್ಲಿ ತೊಡಗಿಸಿಕೊಂಡು ಕಮಿಷನ್ ದಂಧೆಯಲ್ಲಿ ಮುಳುಗಿದೆ. ಬಡವರ ಕಣ್ಣೀರು ಒರೆಸಲಾಗದ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ," ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.
"ರಾಜ್ಯಾದ್ಯಂತ ಇರುವ ಸುಮಾರು 23 ಲಕ್ಷ ಫಲಾನುಭವಿಗಳ ಬಾಕಿ ಪಿಂಚಣಿ ಹಾಗೂ ಗ್ಯಾರಂಟಿ ಯೋಜನೆಗಳ ಹಣವನ್ನು ಸರ್ಕಾರ ತಕ್ಷಣವೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು," ಎಂದು ಅವರು ಎಚ್ಚರಿಸಿದರು.
ಪ್ರಮುಖ ಮುಖಂಡರ ಉಪಸ್ಥಿತಿ:
ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಂ.ಆರ್. ದೇವರಾಜ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕನಕರಾಜ್ ಅರಸ್, ಬಿ.ಜಿ. ಸೋಮಶೇಖರ್, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಕಲ್ಮುರುಡಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎನ್. ವಿಜಯ್ ಕುಮಾರ್, ಹಿರಿಯ ಮುಖಂಡರಾದ ಕೋಟೆ ರಂಗನಾಥ್, ದೀಪಕ್ ದೊಡ್ಡಯ್ಯ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




