ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿಯ ಎಸ್‌ಟಿಆರ್‌ಆರ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯ ನಿವಾಸಿಗಳಾದ ಧನುಷ್ (20) ಹಾಗೂ ಚೇತನ್ (24) ಮೃತಪಟ್ಟ ದುರ್ದೈವಿಗಳು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ತುರ್ತಾಗಿ ರಕ್ತದ ಅಗತ್ಯವಿದ್ದ ಹಿನ್ನೆಲೆಯಲ್ಲಿ, ಇಬ್ಬರೂ ಬೈಕ್‌ನಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಅಪರಿಚಿತ ವಾಹನವೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿ ಪರಾರಿಯಾಗಿರುವ ವಾಹನದ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.




