ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚಿಗೆ ಮುಕ್ತಾಯವಾದ ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕ್ರೀಡಾಪಟುಗಳನ್ನು ವಿಧಾನಸೌಧದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಜಿ. ಪರಮೇಶ್ವರ್, ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಐತಿಹಾಸಿಕ ಮತ್ತು ಮಹತ್ವದ ಕ್ರಮಗಳನ್ನು ಪ್ರಕಟಿಸಿದರು.
ನಗದು ಪುರಸ್ಕಾರ ಭಾರೀ ಹೆಚ್ಚಳ: ಚಿನ್ನದ ಪದಕ: 35 ಲಕ್ಷ ರೂ. ಇದ್ದುದ್ದನ್ನು 1 ಕೋಟಿ ರೂ.ಗೆ ಏರಿಕೆ. ಬೆಳ್ಳಿ ಪದಕ: 25 ಲಕ್ಷ ರೂ. ಇದ್ದುದ್ದನ್ನು 75 ಲಕ್ಷ ರೂ.ಗೆ ಏರಿಕೆ. ಕಂಚಿನ ಪದಕ: 15 ಲಕ್ಷ ರೂ. ಇದ್ದುದ್ದನ್ನು 50 ಲಕ್ಷ ರೂ.ಗೆ ಏರಿಕೆ.
ಈ ಬಾರಿ 8 ಮಂದಿ ಪದಕ ವಿಜೇತರಿಗೆ ಈ ಬಹುಮಾನ ಸಿಗಲಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಕ್ಕಾಗಿ ಹೆಚ್ಚುವರಿಯಾಗಿ ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.
ಸ್ಪರ್ಧಿಸಿದ ಕ್ರೀಡಾಪಟುಗಳಿಗೂ ಬಹುಮಾನ: ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ್ದ ರಾಜ್ಯದ ಇತರೆ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ರೂ. ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.
ಸರ್ಕಾರಿ ಉದ್ಯೋಗದಲ್ಲಿ ಶೇ. 2 ಮೀಸಲಾತಿ: ಸಾಧಕ ಕ್ರೀಡಾಪಟುಗಳ ಭವಿಷ್ಯಕ್ಕೆ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಎಲ್ಲ ಹಂತದ (ಗ್ರೂಪ್-ಎ, ಬಿ, ಸಿ ಮತ್ತು ಡಿ) ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿ ಅಕ್ಟೋಬರ್ 3, 2026ರಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಮೂಲಕ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ.
ಒಲಿಂಪಿಕ್ಸ್ ವಿಶೇಷ ಯೋಜನೆ: ಒಲಿಂಪಿಕ್ಸ್ ಸಿದ್ಧತೆ ಮತ್ತು ತರಬೇತಿಗಾಗಿ 2026-27ನೇ ಸಾಲಿಗೆ ಆಯ್ದ ನಾಲ್ವರು ಕ್ರೀಡಾಪಟುಗಳಾದ ಎಂ.ಆರ್.ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕ ಪಾಟೀಲ್ಹಾಗೂ ಶಿಲ್ಪಾ ಕೆ.ಎಸ್ಅವರಿಗೆ ತಲಾ 10 ಲಕ್ಷ ರೂ. ನಗದು ಪ್ರೋತ್ಸಾಹಧನ ಘೋಷಿಸಲಾಗಿದೆ.
ಕ್ರೀಡಾಪಟುಗಳು ತಮ್ಮ ಸಾಧನೆಯ ನಂತರ ಉದ್ಯೋಗದ ಬಗ್ಗೆ ಆತಂಕಪಡುವ ಪರಿಸ್ಥಿತಿ ಇರಬಾರದು ಎಂಬ ಕಾರಣಕ್ಕೆ ಈ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಡಾ. ಜಿ. ಪರಮೇಶ್ವರ್ತಿಳಿಸಿದರು.




