ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ರಾಜ್ಯದಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗಾಗಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಯಿಂದ ₹1,750 ಕೋಟಿ ನೆರವು ಪಡೆಯಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ಕರ್ನಾಟಕ ಪಬ್ಲಿಕ್ ಶಾಲೆಗಳು ಗುಣಮಟ್ಟದ ಶಿಕ್ಷಣ, ಆಧುನಿಕ ಸೌಕರ್ಯಗಳು ಮತ್ತು ಉತ್ತಮ ಕಲಿಕಾ ಅವಕಾಶಗಳನ್ನು ನೀಡುವ ಮೂಲಕ ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಬಲವಾದ ಹಾಗೂ ಸಮಾನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸಲು ಮತ್ತು ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ಈ ಯೋಜನೆ ಅತ್ಯಂತ ಪ್ರಮುಖವಾಗಿದೆ" ಎಂದು ತಿಳಿಸಿದ್ದಾರೆ.
ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ಸೌರಭ್ ಸಿಂಗ್, ಎಡಿಬಿ ಭಾರತೀಯ ನಿರ್ದೇಶಕಿ ಮಿಯೋ ಒಕಾ, ಕೈ ವೇ ಯೋ, ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್ ಹಾಗೂ ಎಡಿಬಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



