ಚಂದ್ರವಳ್ಳಿ ನ್ಯೂಸ್, ಮೈಸೂರು:
ತಿ.ನರಸೀಪುರ ತಾಲೂಕಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಶೋಭಾಯಾತ್ರೆ ಮೆರವಣಿಗೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಹಾಗೂ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಅವರ ಬೆಂಬಲಿಗರ ವಿರುದ್ಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಜನರ ನೆಮ್ಮದಿಗೆ ಭಂಗ ತರುವುದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಹಾಗೂ ಜಾತಿ-ಧರ್ಮಗಳ ನಡುವೆ ದ್ವೇಷ ಮತ್ತು ವೈಷಮ್ಯ ಹುಟ್ಟುಹಾಕುವಂತಹ ಹೇಳಿಕೆಗಳನ್ನು ನೀಡಿದ ಆರೋಪ ಇವರ ಮೇಲಿದೆ. ಮೆರವಣಿಗೆಯ ವೇಳೆಯಲ್ಲಿ ಸಾರ್ವಜನಿಕ ಶಾಂತತೆಯನ್ನು ಹದಗೆಡಿಸುವ ರೀತಿಯಲ್ಲಿ ಘೋಷಣೆಗಳನ್ನು ಕೂಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಅವರ ಸಹಚರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 132, 191, 194, 196(1)(a)(b) ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.




