ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026–27ನೇ ಸಾಲಿನ ‘ಆತ್ಮ' ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಜಮೀನು ಹೊಂದಿರುವ, ಆಸಕ್ತ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಹಿಂದೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದವರು, ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು, ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ನೌಕರರು, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ನಿವೃತ್ತ ತಾಂತ್ರಿಕ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ.
ಅರ್ಜಿಯ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



