ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಕೂನಿಕೆರೆ ಗ್ರಾಮದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಷ್ಮಾ ರಾಣಿ ಮಾತನಾಡಿ, "ನಮ್ಮ ಹಿರಿಯರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಮಗೆ ಸ್ವಾತಂತ್ರ್ಯ ದೊರೆತಿದೆ. ಅದನ್ನು ಗೌರವಿಸಿ ಉಳಿಸಿ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮದಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು," ಎಂದು ತಿಳಿಸಿದರು.
ಖಾಸಗಿ ಶಾಲೆ ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ – ಕೆ.ಜಿ. ಹನುಮಂತರಾಯ: ಹಿರಿಯೂರು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಜಿ. ಹನುಮಂತರಾಯ ಅವರು ಮಾತನಾಡಿ, "ಸ್ವಾತಂತ್ರ್ಯ ಬಂದು 80 ವರ್ಷಗಳಾಗಿದ್ದರೂ ದೇಶದ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗದೆ ಕುಂಠಿತವಾಗಿದೆ. ಸಾರ್ವಜನಿಕರು ಬುದ್ಧಿವಂತಿಕೆಯಿಂದ ಯೋಚಿಸಿ ಜೀವನ ನಡೆಸಬೇಕಿದೆ. ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು," ಎಂದು ಕರೆ ನೀಡಿದರು. ಬ್ರಿಟಿಷರ ಆಳ್ವಿಕೆಯಲ್ಲಿ ಭಾರತೀಯರು ಅನುಭವಿಸಿದ ನೋವು ಮತ್ತು ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯದ ಮಹತ್ವವನ್ನು ಈ ವೇಳೆ ಸ್ಮರಿಸಿದರು.
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗರಾಜು, ಸನವುಲ್ಲಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೀತಾರಾಮ, ವೀರಣ್ಣ, ಗ್ರಾಮದ ಮುಖಂಡರಾದ ಪ್ರಕೃತಿನ್ ಸಾಬ್, ಇಸ್ಮಾಯಿಲ್, ಮಾರುತಿ, ಗಿರೀಶ್, ಮಹೇಶ್ ಹಾಗೂ ಜಯಣ್ಣ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯ ಕೆ.ಸಿ. ರಮೇಶ್ ಅವರು ಆಗಮಿಸಿದ್ದ ಗಣ್ಯರನ್ನು ಸ್ವಾಗತಿಸಿದರೆ, ಶಿಕ್ಷಕರಾದ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.



