ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಕ್ಕಳ ಸುರಕ್ಷತೆ, ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟಗಳನ್ನು ತಡೆಗಟ್ಟಲು ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ತಿಳಿದುಕೊಂಡು, ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಹೇಳಿದರು.
ತಾಲೂಕಿನ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಸುರಕ್ಷಿತ ಬಾಲ್ಯ ಅಭಿಯಾನ 2026-27’ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ
ಬಡತನ, ಸಾಮಾಜಿಕ ಅಸಮಾನತೆ ಸೇರಿದಂತೆ ಹಲವು ಕಾರಣಗಳಿಂದ ಬಾಲ್ಯ ವಿವಾಹದಂತಹ ಸಮಸ್ಯೆಗಳು ಕಂಡುಬರುತ್ತಿವೆ. ಬಾಲ್ಯ ವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇಂತಹ ಘಟನೆಗಳನ್ನು ತಡೆಗಟ್ಟಲು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಪೋಷಕರು, ಶಿಕ್ಷಕರು ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು. ಅಪರಿಚಿತ ವ್ಯಕ್ತಿಗಳೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು. ಆನ್ಲೈನ್ ವಂಚನೆ, ಸೈಬರ್ ಕಿರುಕುಳ ಅಥವಾ ಬೆದರಿಕೆ ಎದುರಾದರೆ ಭಯಪಡದೆ ಪೋಷಕರು, ಶಿಕ್ಷಕರು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು.
ಹೆಣ್ಣು ಮಕ್ಕಳು ಸೇರಿದಂತೆ ಎಲ್ಲ ಮಕ್ಕಳ ರಕ್ಷಣೆಗೆ ಇರುವ ಪೋಕ್ಸೊ (POCSO) ಕಾಯ್ದೆ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳು, ವಾಹನ ಕಾಯ್ದೆ ಹಾಗೂ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾನೂನುಗಳನ್ನು ಗೌರವಿಸುವುದರ ಜೊತೆಗೆ ಅವುಗಳ ಬಗ್ಗೆ ತಿಳಿದುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ. ರೇಣುಕಾಮೂರ್ತಿ ಮಾತನಾಡಿ ಮಕ್ಕಳಿಗೆ ದೊರೆಯುವ ಉಚಿತ ಕಾನೂನು ನೆರವು, ಮಕ್ಕಳ ಹಕ್ಕುಗಳು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಕಾರ್ಯವೈಖರಿಯ ಕುರಿತು ಮಾಹಿತಿ ನೀಡಿದರು.
ಶ್ರೀವಾಣಿ ಕಾಲೇಜಿನ ಪ್ರಾoಶುಪಾಲ ಬಿ. ಆರ್. ವೇಣುಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪೊಲೀಸ್ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




