ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಭಿಕ್ಷಾಪಾತ್ರೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಆಮಿಷ ಒಡ್ಡಿ, ಇನ್ನೊಂದೆಡೆ ಬಸ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಸರ್ಕಾರದ ಈ ಇಬ್ಬಂದಿ ನೀತಿಯಿಂದ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದಲ್ಲಿ ಬಸ್ ದರ ಏರಿಕೆಯಾಗಿರಲಿಲ್ಲ. ಸರ್ಕಾರ ಜನರ ತಾಳ್ಮೆ ಪರೀಕ್ಷಿಸದೆ ತಕ್ಷಣವೇ ಹೆಚ್ಚಿಸಿದ ದರವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹಾಗೂ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು," ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಅರವಿಂದ ಬೆಲ್ಲದ್, ಎಲ್.ಎ. ರವಿಸುಬ್ರಹ್ಮಣ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




