ಚಂದ್ರವಳ್ಳಿ ನ್ಯೂಸ್, ತುಮಕೂರು:
ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಇಂದು ತುಮಕೂರಿನ ವಿಶ್ವವಿಖ್ಯಾತ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಗದ್ದುಗೆ ದರ್ಶನ ಮತ್ತು ವಿಶೇಷ ಪೂಜೆಛ
ಮಠಕ್ಕೆ ಆಗಮಿಸಿದ ವಿಜಯೇಂದ್ರ ಅವರು 'ನಡೆದಾಡುವ ದೇವರು' ಎಂದೇ ಪೂಜಿಸಲ್ಪಡುವ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭಕ್ತಿಯಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದರು. ಮಠದ ದಾಸೋಹ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಸ್ಮರಿಸಿದ ಅವರು, ಗುರುಗಳ ಆಶೀರ್ವಾದ ಪಡೆದರು.
ಅಭಿಮಾನೋತ್ಸವಕ್ಕೆ ಕಿರಿಯ ಶ್ರೀಗಳಿಗೆ ಆಹ್ವಾನ-
ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರಾಜ್ಯದ ಜನನಾಯಕ ಬಿ.ಎಸ್. ಯಡಿಯೂರಪ್ಪನವರ ‘ಅಭಿಮಾನೋತ್ಸವ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿಯವರನ್ನು ವಿಜಯೇಂದ್ರ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳನ್ನು ಭಕ್ತಿಯಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಿ, ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ವಿಜಯೇಂದ್ರ ಅವರೊಂದಿಗೆ ಪ್ರಮುಖ ನಾಯಕರಾದ ಮಾಜಿ ಉಪಮುಖ್ಯಮಂತ್ರಿ, ಸಂಸದ ಹಾಗೂ ಅಭಿಮಾನೋತ್ಸವ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ, ಶಾಸಕ ಜ್ಯೋತಿ ಗಣೇಶ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಮತ್ತಿತರರು ಇದ್ದರು.
ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ ಅಭಿಮಾನೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.


