ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ ೧೯ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ ೧೯ ರಂದು ಮಧ್ಯಾಹ್ನ ೧ ಗಂಟೆಗೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮಖ್ಯಮಂತ್ರಿಗಳು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆ ನಡೆಸುವರು.
ಅನಂತರ ಮಧ್ಯಾಹ್ನ ೩ ಗಂಟೆಗೆ ರಂಭಾಪುರಿ ಮಠದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಜಿಲ್ಲೆಗೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಆವರಣದ ಕೇಶ್ವಾನ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತಿಳಿಸಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು, ಕಾರ್ಯಕ್ರಮದ ಪೂರ್ವಭಾವಿಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಬಾಳೆಹೊನ್ನೂರಿನಲ್ಲಿ ನಡೆಯಲಿರುವ ಸಭೆಗೆ ಅನುಕೂಲವಾಗುವಂತೆ ಸೂಕ್ತ ವೇದಿಕೆಯನ್ನು ನಿರ್ಮಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮ ಸಂದರ್ಭದಲ್ಲಿ ವಿದ್ಯುತ್ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಲು ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗಣ್ಯರು ಹಾಗೂ ಸಾರ್ವಜನಿಕರಿಗೆ ಊಟೋಪಚಾರದ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಕಲ್ಪಿಸುವ ಬಗ್ಗೆಯೂ ಅಗತ್ಯ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸುವ ಸಲುವಾಗಿ ತಾವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಬಾಳೆಹೊನ್ನೂರಿಗೆ ಭೇಟಿ ನೀಡಲಿರುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮ ನಡೆಯುವ ಸ್ಥಳದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಪುರುರಾಜ್ ಸಿಂಗ್, ಇಂಜಿನಿಯರಿಂಗ್, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.




