ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಈ ಬಾರಿಯ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಅಕ್ಟೋಬರ್ 26ರಂದು ಬೆಳಿಗ್ಗೆ 11ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾದರಿ ನೀತಿ ಸಂಹಿತೆಯ ನಿರ್ದೇಶನಗಳಂತೆ ಕಾರ್ಯಕ್ರಮವನ್ನು ಸರಳವಾಗಿ ಹಮ್ಮಿಕೊಳ್ಳುವುದು ಕಡ್ಡಾಯವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಸೂಚಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
‘ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಯಂತಿ ಆಚರಣೆಗೆ ಅನುಮತಿ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಚಾರ, ಜನಪ್ರತಿನಿಧಿಗಳ, ರಾಜಕೀಯ ಮುಖಂಡರ ಭಾವಚಿತ್ರಗಳು ಹಾಗೂ ಬ್ಯಾನರ್ಗಳನ್ನು ಬಳಸುವಂತಿಲ್ಲ ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕಾಗಿದೆ’ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್. ದಿವಾಕರ್ ಹೇಳಿದರು.
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿ ಆಚರಣೆಯನ್ನು ಸರಳವಾಗಿ ಮಾಡಲು ನಮ್ಮ ಸಂಪೂರ್ಣ ಸಹಕಾರವಿದೆ. ಆದರೆ, ಮುಂದೆ ಸಮಾಜದ ವತಿಯಿಂದ ವಿಜೃಂಭಣೆಯಿಂದ ಕಾರ್ಯಕ್ರಮ ಆಚರಿಸಲು ಅವಕಾಶ ನೀಡಬೇಕು ಎಂದು ಸಮಾಜದ ಮುಖಂಡರು ಮನವಿ ಮಾಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮುಖಂಡರಾದ ವೆಂಕಟೇಶ್, ಲಕ್ಷ್ಮಿಸಾಗರ ರಾಜಣ್ಣ, ನಿವೃತ್ತ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ಜಿಲ್ಲಾ ಪಂಚಾಯಿತಿ ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್, ನಿವೃತ್ತ ಮುಖ್ಯ ಶಿಕ್ಷಕ ಓ.ಬಿ.ಬಸವರಾಜ್, ಮಂಜುನಾಥ್, ಎ.ಟಿ.ತಿಪ್ಪೇಸ್ವಾಮಿ, ದಿನೇಶ್ ಗೌಡಗೆರೆ, ದರ್ಶನ್ ಇಂಗಳದಾಳ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.



