ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ತಾಲೂಕಿನ ರಾಂಪುರದ ಎಸ್.ಪಿ.ಎಸ್.ಆರ್. ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಮತ್ತು ಆಶ್ರಿತ ಸಂಸ್ಥೆ, ಚಿತ್ರದುರ್ಗ ಇವರ ಆಶ್ರಯದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಬಾಲ್ಯ ವಿವಾಹ ಹಾಗೂ ಬಲವಂತದ ವಿವಾಹ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎನ್.ವೈ. ಗೋಪಾಲಕೃಷ್ಣ ಅವರು, ವಿದ್ಯಾರ್ಥಿಗಳು ಬಾಲ್ಯ ವಿವಾಹಕ್ಕೆ ಒಳಗಾಗದೆ ತಮ್ಮ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉನ್ನತ ಶಿಕ್ಷಣ ಪಡೆದು ವೈದ್ಯರು, ಇಂಜಿನಿಯರ್ಗಳು, ಅಧಿಕಾರಿಗಳು ಸೇರಿದಂತೆ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.
ಮಕ್ಕಳ ಬಾಲ್ಯ ಮತ್ತು ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಬಾಲ್ಯ ವಿವಾಹವನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
"ಮಕ್ಕಳ ಭವಿಷ್ಯ ಮದುವೆಯಲ್ಲಿ ನಿರ್ಧಾರವಾಗಬಾರದು, ಶಿಕ್ಷಣದಲ್ಲಿ ನಿರ್ಧಾರವಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಕನಸು ಕಂಡು ಅದನ್ನು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು" ಎಂದು ಶಾಸಕರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಜಿಲ್ಲಾ ಸಂಯೋಜಕ ಡಿ ಓ ಮುರಾರ್ಜಿ, ತಾಲೂಕು ಸಂಯೋಜಕ ಭಟ್ರಹಳ್ಳಿ ಧನಂಜಯ, ಪ್ರಾಶುಪಾಲ ಡಾ ತಿಮ್ಮಣ್ಣ, ಕೆ ಬಿ ಓಂಕಾರಪ್ಪ, ಶಾಲಾ ನಿರ್ದೇಶಕ ಅಪ್ಪಾರೆಡ್ಡಿ, ತಿಪ್ಪೇಸ್ವಾಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಎನ್ ರಾಘವೇಂದ್ರ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




