ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಗಾಯತ್ರಿ ಜಲಾಶಯದ ಬಳಿಯ ಕರಿಯಾಲ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಗೋಶಾಲೆಯನ್ನು ಭಾನುವಾರ ಜಿಲ್ಲಾಧಿಕಾರಿ ಎಸ್. ರಮ್ಯಾ ಅವರು ಉದ್ಘಾಟಿಸಿದರು.
ಉದ್ಘಾಟನೆಯ ಬಳಿಕ ಜಿಲ್ಲಾಧಿಕಾರಿ ಎಸ್.ರಮ್ಯಾ ಹಾಗೂ ಇತರ ಗಣ್ಯರು ಜಾನುವಾರುಗಳಿಗೆ ಮೇವು ವಿತರಿಸುವ ಮೂಲಕ ಗೋಶಾಲೆಯ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.
ಬರಗಾಲ ಮತ್ತು ಸಂಕಷ್ಟದ ಸಮಯದಲ್ಲಿ ರೈತರ ಜಾನುವಾರುಗಳಿಗೆ ಆಶ್ರಯ, ಕುಡಿಯುವ ನೀರು ಹಾಗೂ ಮೇವು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಸಿದ್ದೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಸಿ. ತಿಪ್ಪೇಸ್ವಾಮಿ, ಸಹಾಯಕ ನಿರ್ದೇಶಕ ಡಾ. ರಮೇಶ್, ಪಶು ಪರೀಕ್ಷಕ ಲೋಹಿತಾಶ್ವ ಸೇರಿದಂತೆ ಕಂದಾಯ ಹಾಗೂ ಪಶುಸಂಗೋಪನಾ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.




