ಚಂದ್ರವಳ್ಳಿ ನ್ಯೂಸ್, ತುಮಕೂರು:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಯಶಸ್ವಿ ಆಡಳಿತದ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯ ಸಮಗ್ರ ಪ್ರಗತಿ ಹಾಗೂ 'ವಿಕಸಿತ ತುಮಕೂರು' ನಿರ್ಮಾಣದ ದೂರದೃಷ್ಟಿಯ (ವಿಷನ್) ಕುರಿತು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ವಿ. ಸೋಮಣ್ಣ ಅವರ ನೇತೃತ್ವದಲ್ಲಿ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸಿದ್ದರು.
'ವಿಕಸಿತ ತುಮಕೂರು' ನಮ್ಮ ಗುರಿ:
ಕೇಂದ್ರ ಸಚಿವ ವಿ. ಸೋಮಣ್ಣಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಸುಶಾಸನವು ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೂ ತಲುಪುತ್ತಿವೆ. ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯನ್ನು ಕೈಗಾರಿಕೆ, ಮೂಲಸೌಕರ್ಯ ಮತ್ತು ಶಿಕ್ಷಣ ಸೇರಿದಂತೆ ಎಲ್ಲಾ ರಂಗಗಳಲ್ಲೂ ಮಾದರಿಯಾಗಿಸುವ ಮೂಲಕ 'ವಿಕಸಿತ ತುಮಕೂರು' ಪರಿಕಲ್ಪನೆಯನ್ನು ಸಾಕಾರಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಸಚಿವರೊಂದಿಗೆ ಪಕ್ಷದ ಪ್ರಮುಖ ನಾಯಕರಾದ ಶಾಸಕರಾದ ಸುರೇಶ್‌ಗೌಡ, ಜಿ.ಬಿ. ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಮಾಜಿ ವಿಧಾನಪರಿಷತ್‌ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವೈ.ಎಚ್. ಹುಚ್ಚಯ್ಯ, ಬಿಜೆಪಿ ಮುಖಂಡರಾದ ಗುಬ್ಬಿ ಕ್ಷೇತ್ರದ ನಾಯಕ ದಿಲೀಪ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌ಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿ ಚರ್ಚೆ: ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳನ್ನು ಜಿಲ್ಲೆಯ ಮನೆ ಮನೆಗೆ ತಲುಪಿಸಲು ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ಗೋಷ್ಠಿಯಲ್ಲಿ ಹಂಚಿಕೊಳ್ಳಲಾಯಿತು. ಜಿಲ್ಲೆಯ ಹೆದ್ದಾರಿ ಯೋಜನೆಗಳು, ರೈಲ್ವೆ ಸಂಪರ್ಕ ಹಾಗೂ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡಿರುವ ಕೊಡುಗೆಗಳ ಕುರಿತು ಈ ಸಂದರ್ಭದಲ್ಲಿ ಬೆಳಕು ಚೆಲ್ಲಲಾಯಿತು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳು, ಬಿಜೆಪಿ ಜಿಲ್ಲಾ ಘಟಕದ ವಿವಿಧ ಪ್ರಕೋಷ್ಟಗಳ ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.



