ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸರ್ಕಾರಿ ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೇ ದೊಡ್ಡಬಳ್ಳಾಪುರದ ಹಿಂದಿನ ಉಪವಿಭಾಗಾಧಿಕಾರಿ ದುರ್ಗಾಶ್ರೀ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ ಪತ್ರ ಹಾಗೂ ಕಂದಾಯ ಆಯುಕ್ತಾಲಯದ ನಿರ್ದೇಶನ ಮೇರೆಗೆ ಈಗಿನ ಉಪವಿಭಾಗಾಧಿಕಾರಿ ಟಿ.ಆರ್.ಮಂಜುನಾಥ್ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಮೂರು ಗ್ರಾಮಗಳ 87 ಸರ್ವೆ ನಂಬರ್ಗಳಲ್ಲಿನ 68 ಎಕರೆ ಜಮೀನುಗಳಿಗೆ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಅವುಗಳನ್ನು ಭೂ ಸುರಕ್ಷಾ ಭೂದಾಖಲೆಗಳ ಆರ್ ಟಿಸಿ ಮ್ಯಾನೇಜ್ಮೆಂಟ್ ತಂತ್ರಾಂಶದಲ್ಲಿ ಅಕ್ರಮವಾಗಿ ಅಳವಡಿಸಿರುವುದು ಹಾಗೂ ದಾಖಲೆಗಳ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಬಗ್ಗೆ ಎಫ್ಐರ್ನಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 318(4), 335, 337, 340(2), 341 (2) 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಲವು ಮಾದ್ಯಮಗಳಲ್ಲಿ ಸರಣಿ ವರದಿಗಳು ಪ್ರಕಟವಾಗಿದ್ದವು. ಎಫ್ಐಆರ್ನಲ್ಲಿ ಪತ್ರಿಕಾ ವರದಿಗಳನ್ನು ಉಲ್ಲೇಖಿಸಲಾಗಿದೆ.
ಪ್ರಸ್ತುತ ದುರ್ಗಾಶ್ರೀ ಅವರು ಬೆಂಗಳೂರಿನ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.




