ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ (MLC) ಚುನಾವಣೆ ಹಿನ್ನೆಲೆಯಲ್ಲಿ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ಎಲ್ಲಾ ಅಭ್ಯರ್ಥಿಗಳ ಅಧಿಕೃತ ಗೆಲುವಿಗಾಗಿ ಭರ್ಜರಿ ಕಾರ್ಯತಂತ್ರ ರೂಪಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಂಟಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಬೆಂಗಳೂರಿನಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸರ್ಕಾರದ ಪ್ರಮುಖ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು.
ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ:
ಸಭೆಯ ಬಳಿಕ ಜಂಟಿ ಸಂದೇಶ ನೀಡಿರುವ ನಾಯಕರು, "ವಿಧಾನ ಪರಿಷತ್ ಚುನಾವಣೆ ಸಂಬಂಧ ಇಂದು ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರೆಲ್ಲರೂ ಒಟ್ಟಾಗಿ ಸಭೆ ಸೇರಿದ್ದೇವೆ. ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ದಕ್ಕೆಯಿಲ್ಲದ ಗೆಲುವಿಗಾಗಿ ಅನುಸರಿಸಬೇಕಾದ ಸೂಕ್ತ ಕಾರ್ಯತಂತ್ರಗಳು ಮತ್ತು ಮತಗಳ ಹಂಚಿಕೆ ಕುರಿತು ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದೇವೆ" ಎಂದು ತಿಳಿಸಿದ್ದಾರೆ.
ಒಗ್ಗಟ್ಟಿನ ಪ್ರದರ್ಶನ:
ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮೊದಲ ಪ್ರಮುಖ ಸಾಂಸ್ಥಿಕ ಸವಾಲಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಒಟ್ಟಾಗಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಕಣಕ್ಕಿಳಿದಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲದ ಆಧಾರದ ಮೇಲೆ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಮತದಾನದ ವೇಳೆ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದಂತೆ ಶಾಸಕರಿಗೆ ಸಭೆಯಲ್ಲಿ ಸ್ಪಷ್ಟ ಸೂಚನೆ ಹಾಗೂ ಮಾರ್ಗದರ್ಶನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



