ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ಮೊದಲ ಸಚಿವ ಸಂಪುಟ ಸಭೆಯ ನಂತರ ಘೋಷಿಸಿದ್ದ “ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್” ಯೋಜನೆಯನ್ನು ಸರ್ಕಾರ ಆದೇಶ ಮಾಡಿ ಹೊರಡಿಸಿದೆ.
ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿತ್ತು.
ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.
ಮುಂದುವರೆದು, ಈ ಯೋಜನೆಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



