ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾದಗೊಂಡನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕಾನೂನು ಅರಿವು ಜನಜಾಗೃತಿ ವೇದಿಕೆಯ ವತಿಯಿಂದ ಹೀಲಿನ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಸುಮಾರು 700ರಿಂದ 800 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುವ ಗುರಿ ಹೊಂದಲಾಗಿತ್ತು. ವಿದ್ಯಾರ್ಥಿಗಳಿಗೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪ್ರಮಾಣ (ಶುಗರ್), ಇಸಿಜಿ ಹಾಗೂ ಕಣ್ಣಿನ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲಾಗಿತ್ತು.
ಅರೋಗ್ಯ ಶಿಬಿರದಲ್ಲಿಕಾನೂನು ಅರಿವು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ ನಮ್ಮ ಸಂಘಟನೆಯ ವತಿಯಿಂದ ಇದೇ ಮೊದಲ ಬಾರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಹೀಲಿನ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಅರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 700ರಿಂದ 800 ವಿದ್ಯಾರ್ಥಿಗಳಿದ್ದು, ಎಲ್ಲರಿಗೂ ಆರೋಗ್ಯ ತಪಾಸಣೆ ಮಾಡಿಸುವ ಉದ್ದೇಶ ಹೊಂದಲಾಗಿದೆ.
ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ತಪಾಸಣೆ ನಡೆಸಲು ಪ್ರತಿ ತರಗತಿಯ ವಿದ್ಯಾರ್ಥಿಗಳು ತಪಾಸಣೆ ಪೂರ್ಣಗೊಳಿಸಿದ ನಂತರ ಮತ್ತೊಂದು ತರಗತಿಯ ವಿದ್ಯಾರ್ಥಿಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿತ್ತು ಎಂದರು.
ಇದೇ ವೇಳೆ ಶಿಬಿರದಲ್ಲಿ ಓರ್ವ ವಿದ್ಯಾರ್ಥಿಗೆ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಇದ್ದ ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸತೀಶ್ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ ಕಾನೂನು ಅರಿವು ಜನಜಾಗೃತಿ ವೇದಿಕೆ ಹಾಗೂ ಹೀಲಿನ್ ಆಸ್ಪತ್ರೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ವೇದಿಕೆಯ ಗೌರವಾಧ್ಯಕ್ಷ ಮಂಜುನಾಥ್ ಎಚ್., ತಾಲೂಕು ಅಧ್ಯಕ್ಷ ಸತೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಸಹ ಕಾರ್ಯದರ್ಶಿ ಮುನಿರಾಜು, ರವಿ, ಶಿವಕುಮಾರ್ ಶಿವಪುರ, ಮಲ್ಲತಳ್ಳಿ ರವಿ, ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.




