ಚಂದ್ರವಳ್ಳಿ ನ್ಯೂಸ್, ಚೆನ್ನೈ:
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ವಿಚಾರದಲ್ಲಿ ಇದೀಗ ಕಾಂಗ್ರೆಸ್ ಪಕ್ಷದೊಳಗೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಹಾಗೂ ಇದಕ್ಕೆ ಕೇಂದ್ರ ಸರ್ಕಾರ ಅಂತಿಮ ಅನುಮೋದನೆ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಹೇಳಿಕೆಯನ್ನು ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಾಣಿಕ್ಯಂ ಟ್ಯಾಗೋರ್ ತೀವ್ರವಾಗಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣ 'ಎಕ್ಸ್' (X) ಮೂಲಕ ಟ್ಯಾಗೋರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯು ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಉಲ್ಲಂಘನೆಯಾಗಿದ್ದು, ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ತತ್ವಕ್ಕೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕಾವೇರಿ ಕಣಿವೆಯ ಕೆಳಹಂತದ ರಾಜ್ಯವಾದ ತಮಿಳುನಾಡಿನ ರೈತರ ಜೀವನೋಪಾಯಕ್ಕೆ ಈ ಅಣೆಕಟ್ಟು ಮಾರಕವಾಗಲಿದೆ. ಆದ್ದರಿಂದ, ತಮಿಳುನಾಡು ಸೇರಿದಂತೆ ಕೆಳಭಾಗದ ರಾಜ್ಯಗಳ ಸಂಪೂರ್ಣ ಒಪ್ಪಿಗೆ ಪಡೆಯದೆ ಕರ್ನಾಟಕ ಏಕಪಕ್ಷೀಯವಾಗಿ ಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವೂ ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಟ್ಯಾಗೋರ್ ಒತ್ತಾಯಿಸಿದ್ದಾರೆ.




