ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಬೇಕಿದ್ದ 2,186.20 ಕೋಟಿ ರೂ. ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ವಿಶೇಷ ಅರ್ಜಿ (ಎಸ್ಎಲ್ಪಿ) ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, "ಅಗತ್ಯ ದಾಖಲೆ ಸಲ್ಲಿಸಿ ಹಲವು ಬಾರಿ ಮನವಿ ಮಾಡಿದರೂ 2025-26ನೇ ಸಾಲಿನ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ. ಎಲ್ ನಿನೋ ಪರಿಣಾಮ ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದು, ಪಂಚಾಯಿತಿಗಳಲ್ಲಿ ತುರ್ತು ದುರಸ್ತಿಗೂ ಹಣವಿಲ್ಲದಂತಾಗಿದೆ. ಹೀಗಾಗಿ ವಿಳಂಬ ಮಾಡದೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಿದೆ" ಎಂದರು.
ಈ ಹಿಂದೆಯೂ ಅನುದಾನಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನ್ನು ಸ್ಮರಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ಪ್ರಕರಣದಲ್ಲೂ ಕಾನೂನು ಹೋರಾಟಕ್ಕೆ ಅವಕಾಶವಿದೆ ಎಂದು ಸಚಿವರಿಗೆ ತಿಳಿಸಿದರು.
ಇದೇ ವೇಳೆ ಪಿಡಿಒಗಳ ಜ್ಯೇಷ್ಠತಾ ಪಟ್ಟಿ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇಲಾಖೆಯ ಇತರ ಪ್ರಕರಣಗಳ ಕುರಿತೂ ಚರ್ಚಿಸಲಾಯಿತು. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕಾರ್ಯದರ್ಶಿ ಡಿ. ರಂದೀಪ್ ಸೇರಿದಂತೆ ಕಾನೂನು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.




