ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಪ್ರಯತ್ನಗಳನ್ನು ಸರ್ಕಾರ ಸಹಿಸುವುದಿಲ್ಲ ಮತ್ತು ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಲೇಖಕ ರವಿ ಹಂಜ್‌ಎಂಬುವವರು ಬರೆದಿರುವ 'ಬಸವ ಮಂಟಪ' ಎಂಬ ವಿವಾದಿತ ಕೃತಿಯಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಎಫ್‌ಐಆರ್ ದಾಖಲು: ಈ ವಿವಾದದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ನಾಡಿನ ಸಾಂಸ್ಕೃತಿಕ ನಾಯಕನಿಗೆ ಅಪಮಾನ ಎಸಗಿದ ಆರೋಪದ ಮೇಲೆ ಲೇಖಕ ರವಿ ಹಂಜ್‌ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಸವಣ್ಣನವರ ಕೊಡುಗೆ ಸ್ಮರಣೆ: 12ನೇ ಶತಮಾನದಲ್ಲಿಯೇ 'ಅನುಭವ ಮಂಟಪ'ದ ಮೂಲಕ ಜಗತ್ತಿಗೆ ಮೊಟ್ಟಮೊದಲ ಬಾರಿಗೆ ಸಂಸತ್ತಿನ ಪರಿಕಲ್ಪನೆಯನ್ನು ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಸಮಾನತೆ, ಕಾಯಕ, ದಾಸೋಹ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಅವರು ಎಂದು ಬಣ್ಣಿಸಿದ್ದಾರೆ.
ಸರ್ಕಾರದ ನಿಲುವು: ರಾಜ್ಯ ಸರ್ಕಾರವು ಬಸವಣ್ಣನವರ ಕಾಯಕ ತತ್ವಗಳ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ನಾಡಿನ ಮಹನೀಯರ ಬಗ್ಗೆ ಹಗುರವಾಗಿ ಬರೆಯುವ ಮತ್ತು ಸಮಾಜದ ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.




