ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ನೂತನ ನಾಯಕರನ್ನು ಆಯ್ಕೆ ಮಾಡಲು ಮೇ 30ರ ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ.
ಹೈಕಮಾಂಡ್ ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣ ವಚನ!
ಬಹಿರಂಗ ಜಾಗದಲ್ಲಿ, ಅದೂ ಪ್ರಜಾಪ್ರಭುತ್ವದ ದೇಗುಲ ಎನಿಸಿಕೊಂಡಿರುವ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲೇ ಪದಗ್ರಹಣ ಮಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಅವರ ತೀವ್ರ ಆಕಾಂಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ, ವಿಧಾನಸೌಧದ ಆವರಣದಲ್ಲಿ ಈಗಿನಿಂದಲೇ ಯುದ್ಧೋಪಾದಿಯಲ್ಲಿ ಪೂರ್ವ ಸಿದ್ಧತೆಗಳು ಆರಂಭವಾಗಿವೆ. ವೇದಿಕೆ ನಿರ್ಮಾಣ, ವಿವಿಐಪಿಗಳಿಗೆ ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಭರದಿಂದ ನಡೆಸುತ್ತಿದ್ದಾರೆ.
ಹೈ ಅಲರ್ಟ್: ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಸಭೆ
ರಾಜ್ಯದ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭಕ್ಕೆ ಗಣ್ಯಾತಿಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಶುಕ್ರವಾರ ಉನ್ನತ ಮಟ್ಟದ ಮಹತ್ವದ ಭದ್ರತಾ ಪರಿಶೀಲನಾ ಸಭೆ ನಡೆದಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಲಾಗಿದೆ.
ಮುಂದಿನ ನಡೆ: ಶನಿವಾರ ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದು, ಆ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಯಿದೆ.



